ಸವಣೂರು | ನೇತಾಜಿ ಸುಭಾಷ್‌ಚಂದ್ರ ಭೋಸ್ ಜನ್ಮದಿನಾಚರಣೆ | ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಉಪನ್ಯಾಸ

ಸವಣೂರು : ರಾಷ್ಟ್ರ ನಿರ್ಮಾಣದ ಜವಾಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆಂಬ ಸುಭಾಷ್‌ರ ದಿಟ್ಟನಿಲುವಿನ ಅಪ್ರತಿಮ ದೇಶಭಕ್ತರಾಗಿದ್ದರು.ಆತ್ಮಾಭಿಮಾನದ ಸ್ವರಾಜ್ಯಹೋರಾಟಕ್ಕೆ ಬಲತುಂಬಿದವರು ಬೋಸ್ ಅವರು ತಾನು ಕಷ್ಟಪಟ್ಟುಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ ಬೋಸ್‌ರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲಮಾನದ ಯಾರೊಬ್ಬರಲ್ಲೂ ಇರಲಿಲ್ಲ ಎಂದು ಸುಳ್ಯ ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು.

ಅವರು ಜ.೨೩ ರಂದು ಸವಣೂರು ಸರಕಾರಿ ಪ್ರೌಢಶಾಲೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ಆಶ್ರಯದಲ್ಲಿ ಸವಣೂರು ಸ.ಪ.ಪೂ.ಕಾಲೇಜು (ಪ್ರೌಢ ಶಾಲಾ ವಿಭಾಗ) ಇದರ ಸಹಕಾರದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ ಜನ್ಮದಿನಾಚರಣೆಯ ಅಂಗವಾಗಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಸ್ಟ್ರಿಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನ ಓಡಾಟ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ತೀವ್ರತೆ ತಂದಿದ್ದ ಬೋಸರು, ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿ ಮಾಡಿದವರಲ್ಲ. ಶೀಘ್ರ ಸ್ವಾತಂತ್ರ್ಯಪ್ರಾಪ್ತಿಗಾಗಿ ಅವರು ಮಂಡಿಸುತ್ತಿದ್ದ ವಾದಗಳು, ಅದಕ್ಕಾಗಿ ಶ್ರಮಿಸಬೇಕಾದ ತ್ವರಿತ ಸಿದ್ಧತೆಗಳ ಕುರಿತು ಬೋಸ್‌ರ ನಿಲುವುಗಳು ದೇಶಭಕ್ತಿಯ ಪ್ರತೀಕವಾಗಿತ್ತು ಎಂದು ಡಾ.ರಾಘವೇಂದ್ರ ಪ್ರಸಾದ್ ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ, ಬೋಸ್‌ರಂತಹ ಮಹಾನ್ ರಾಷ್ಟ್ರನಾಯಕನ ಜೀವನದ ಘಟನೆಗಳ ಮೆಲುಕೇ ಸ್ಪೂರ್ತಿಯುತ. ಕಲಿಯಬೇಕಾದ ಪಾಠಗಳೂ ಹತ್ತಾರು. ಅತ್ಯುತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದ್ದ ಬೋಸರು ರಾಷ್ಟಕ್ಕೇ ದಿಗ್ದರ್ಶನ ಮಾಡಿದವರು. ಆ ಮಂತ ನಾಯಕನ ಜೀವನದಿಂದ ಸಿಗುವ ಅಖಂಡ ಪ್ರೇರಣೆ ಯುವಜನತೆಗೆ ದಾರಿದೀಪವಾಗಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಸವಣೂರು ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಮಾತನಾಡಿದರು.

ಸವಣೂರು ಸ.ಪ.ಪೂ.ಕಾಲೇಜಿನ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ,ಸವಣೂರು ಪಢಶಾಲೆಯ ಮುಖ್ಯಗುರು ರಘು ಬಿ.ಎಸ್,ಶ್ರೀ ಕ್ಷೇ.ಧ.ಗ್ರಾ.ಯೋ.ಸವಣೂರು ವಲಯ ಮೇಲ್ವಿಚಾರಕಿ ಅಶ್ವಿನಿ ಎಂ.ಜಿ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಉಪಸ್ಥಿತರಿದ್ದರು.

ಲೋಕನಾಥ ವಜ್ರಗಿರಿ,ಜಿತಾಕ್ಷ ,ಪ್ರಶಾಂತ್,ಕಿಶನ್ ಅತಿಥಿಗಳನ್ನು ಗೌರವಿಸಿದರು.ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ ಅವರು ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು.

ಸವಣೂರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು ಸ್ವಾಗತಿಸಿ, ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಕುಮಾರ್ ವಂದಿಸಿದರು. ಮಾಜಿ ಅಧ್ಯಕ್ಷ ದಯಾನಂದ ಮೆದು ಕಾರ್ಯಕ್ರಮ ನಿರೂಪಿಸಿದರು.

Leave A Reply

Your email address will not be published.