ಮಾ.7 – 8 : ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ

ಮಂಗಳೂರು : ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ 2020, ಮಾ.7 ಮತ್ತು 8 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ ರಾಜ್ಯ ಸಮ್ಮೇಳನ ನಡೆಯುತ್ತಿ ದೆ.

 

1976 ಅಕ್ಟೋಬರ್ 6 ರಂದು ಉದಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಇದೀಗ ನಿರಂತರ ರಚನಾತ್ಮಕ ಚಟುವಟಿಕೆಗಳ ಆಗರದಂತಿದೆ. ಈಗಾಗಲೇ ದೇಶದಲ್ಲೇ ಅಭೂತಪೂರ್ವ ಎನಿಸಿದ ಎರಡು ಗ್ರಾಮ ವಾಸ್ತವ್ಯ ಕಾರ್ಯಗಳಿಂದ ಮನೆ ಮಾತಾಗಿದೆ.

2019ರ ಜುಲೈ 1 ರಂದು ಮಂಗಳೂರಿನಲ್ಲಿ ಮೊಟ್ಟ ಮೊದಲ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಸಂಘಟಿಸಿತ್ತು. ಇದೀಗ ಕರಾವಳಿಯ ಚರಿತ್ರೆಯಲ್ಲಿ ಮೊದಲ ಬಾರಿಗೆ ಕೆಯುಡಬ್ಲ್ಯುಜೆ ವತಿಯಿಂದ ನಡೆಯಲಿರುವ ರಾಜ್ಯ ಸಮ್ಮೇಳನಕ್ಕೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆತಿಥ್ಯ ವಹಿಸಿಕೊಂಡಿದೆ.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿದ್ದಾರೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮ್ಮೇಳನದ ವೆಬ್‌ಸೈಟ್‌ನ್ನು ಅನಾವರಣಗೊಳಿಸಿ ಸಮ್ಮೇಳನದ ತಯಾರಿಗೆ ಚಾಲನೆ ನೀಡಿದ್ದಾರೆ. ಈಗಾಗಲೇ ಸಮ್ಮೇಳನದಲ್ಲಿ ಭಾಗವಹಿಸಲಿರುವ ಸದಸ್ಯರ ನೋಂದಣಿ ಪ್ರಕ್ರಿಯೆ ವೆಬ್‌ಸೈಟ್ ಮೂಲಕ ಆರಂಭಗೊಂಡಿದೆ.

ಸಮ್ಮೇಳನದ ತಯಾರಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ ವೈ ಮತ್ತು ಯು.ಟಿ.ಖಾದರ್ ಸಮ್ಮೇಳನದ ತಯಾರಿಗೆ ಕೈ ಜೋಡಿಸಿದ್ದಾರೆ. ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ದೆಹಲಿ, ಮುಂಬೈ, ಜೈಪುರ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ಮತ್ತು ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶ ವಿದೇಶಿ ಪತ್ರಕರ್ತರು ಸೇರಿದಂತೆ ಸುಮಾರು 3 ಸಾವಿರಕ್ಕೂ ಅಧಿಕ ಸದಸ್ಯರು ಪಾಲ್ಗೊಳ್ಳಲಿದ್ದಾರೆ .

ಸಮ್ಮೇಳನವನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸಾನಿಧ್ಯದಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾಹಿತಿ ನೀಡಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

Leave A Reply

Your email address will not be published.