ಆರೋಗ್ಯ ಸೇನಾನಿಗಳ ಮೇಲೆ ಹಲ್ಲೆ ನಡೆಸುವವರಿಗೆ ಏಳು ವರ್ಷ ಜೈಲು ಶಿಕ್ಷೆ | ಕೇಂದ್ರದ ಸುಗ್ರೀವಾಜ್ಞೆ
ನವದೆಹಲಿ, ಏಪ್ರಿಲ್ 22 : ಅನಾಹುತಕಾರಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದರ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸೇನಾನಿಗಳ ಮೇಲೆ ಹಲ್ಲೆ ನಡೆಸುವವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ಇಂದು ಸುಗ್ರೀವಾಜ್ಞೆ ಹೊರಡಿಸಿದೆ.
ಈ ಮಹತ್ವದ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಅವರು ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ಜಾವೇಡಕರ್ ಅವರು, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಸಾಂಕ್ರಾಮಿಕ ರೋಗದಿಂದ ದೇಶವನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆಸುವುದು ಮತ್ತು ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂಬಂಧ ಸುಗ್ರೀವಾಜ್ಞೆ ಜಾರಿಗೊಳಿಸಿದ್ದು ಇದರಲ್ಲಿ ಕೊರೋನಾ ಸೇನಾನಿಗಳ ಮೇಲೆ ಹಲ್ಲೆ ನಡೆಸುವವರಿಗೆ 6 ತಿಂಗಳಿಂದ 7 ವರ್ಷ ಜೈಲು ಶಿಕ್ಷೆ ನೀಡಲು ಅವಕಾಶವಿದೆ ಎಂದು ತಿಳಿಸಿದ್ದಾರೆ.