ಎಸ್ಎಸ್​​ಎಲ್​​ಸಿ ಪರೀಕ್ಷೆ ಬೇಡವೇ ಬೇಡ | ಹೈಕೋರ್ಟ್​ಗೆ ಸಲ್ಲಿಕೆಯಾಯ್ತು ಪಿಐಎಲ್​​….!

Share the Article

ಬೆಂಗಳೂರು: ಮುಂದಿನ ಜೂನ್ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕೈಗೊಂಡಿರುವ ನಿರ್ಧಾರವನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ವಕೀಲರಾದ ಎಂ.ಲೋಕೇಶ್ ಮತ್ತಿತರು ಈ ಪಿಐಎಲ್ ಅರ್ಜಿ ಸಲ್ಲಿಸಿದ್ದು, ಕೊರೊನಾ ಸೋಂಕು ಹಬ್ಬುತ್ತಿರುವ ಸಮಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಸರಿಯಾದುದಲ್ಲ. ಆದ್ದರಿಂದ ಪರೀಕ್ಷೆಗಳನ್ನು ರದ್ದುಪಡಿಸಿ, ವಿದ್ಯಾರ್ಥಿಗಳು ಈ ಹಿಂದಿನ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಪಾಸ್​ ಮಾಡಲು ಶಿಕ್ಷಣ ಇಲಾಖೆ‌ ಮತ್ತು ಎಸ್‌ಎಸ್‌ಎಲ್‌ಸಿ ಮಂಡಳಿಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಈ ಅರ್ಜಿ ಇತ್ಯರ್ಥವಾಗುವವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸದಂತೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ನಿದೇರ್ಶಿಸಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ, ಎಸ್‌ಎಸ್‌ಎಲ್‌ಸಿ ಮಂಡಳಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೆ ವಿಚಾರಣೆಗೆ ನಿಗದಿಯಾಗಬೇಕಿದೆ.

ಕೊರೊನಾ ಸೋಂಕು ಹರಡಲು ಆರಂಭಿಸಿದ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ತಡೆಹಿಡಿದಿದ್ದ ಸರ್ಕಾರ, ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಜೂ. 25ರಿಂದ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಅದರಂತೆ ಮೇ. 18ರಂದು ವೇಳಾಪಟ್ಟಿ ಪ್ರಕಟಿಸಿದ್ದು, ಇದೀಗ ಒಟ್ಟು 8.48ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಿದ್ದರಾಗುತ್ತಿದ್ದಾರೆ.

ಆದರೆ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಈ ವೇಳೆಯಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮತ್ತವರ ಕುಟುಂಬ ವರ್ಗಕ್ಕೂ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಪಂಜಾಬ್ ರಾಜ್ಯಗಳ ಮಾದರಿಯಲ್ಲಿ ಹತ್ತನೇ ತರಗತಿ ಪರೀಕ್ಷೆ ನಡೆಸದಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Leave A Reply

Your email address will not be published.