ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ಲಾನ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರು ಬೂತ್ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಪ್ಲಾನ್ ರೆಡಿ ಮಾಡಿದ್ದಾರೆ.ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿತರಾದರೆ ಗ್ರಾ.ಪಂ.ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಣೆ ಮಾಡಲು ಸಾಧ್ಯ.
ಈ ನಿಟ್ಟಿನಲ್ಲಿ ಆಪರೇಷನ್ ಕಮಲ, ಆಂತರಿಕ ಭಿನ್ನಮತ ಹಾಗೂ ಕೊರೊನಾ ಸಂಕಷ್ಟದ ನಡುವೆಯೂ ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸರಣಿ ಸಭೆಗಳು ನಡೆಯುತ್ತಿದೆ.
ಜೂನ್ 7 ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ದತೆಗಳು ನಡೆಯುತ್ತಿದೆ. ಈ ನಡುವೆ ಶಾಸಕರು ಹಾಗೂ ಪಕ್ಷದ ಮುಖಂಡರ ಜೊತೆಗೆ ಡಿಕೆಶಿ ಚರ್ಚೆ ನಡೆಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸಂಘಟನೆಯ ಕುರಿತಾಗಿ ವಿವಿಧ ವಿಭಾಗಗಳ ಪದಾಧಿಕಾರಿಗಳ ಜೊತೆಗೆ ಡಿಕೆ ಶಿವಕುಮಾರ್ ಮಾತುಕತೆ ನಡೆಸುತ್ತಿದ್ದಾರೆ.
ಬುಧವಾರ ಶಾಸಕರು ಜೊತೆಗೆ ಚರ್ಚೆ ನಡೆಸಿದರೆ ಗುರುವಾರ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಜೊತೆಗೆ ಮಾತುಕತೆ ನಡೆಸಿದ್ದಾರೆ.
ಜಿಲ್ಲಾಧ್ಯಕ್ಷರುಗಳ ಜೊತೆಗೂ ನೇರ ಮಾತುಕತೆ ನಡೆಸುವ ಮೂಲಕ ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆಯ ಕುರಿತಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ಮಧ್ಯಾಹ್ನ 2 ಗಂಟೆಯಿಂದ 7 ಗಂಟೆಯ ವರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜೊತೆಗೂ ಡಿಕೆಶಿ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲಿ ತಲೆದೋರಿದ್ದ ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ ಕೆಪಿಸಿಸಿ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿತ್ತು. ಇದೀಗ ಮತ್ತೆ ಪುನಾರಚನೆ ಮಾಡಲು ಸಿದ್ದತೆಗಳು ನಡೆಯುತ್ತಿವೆ.
ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಆದ ಬಳಿಕ ರಾಜ್ಯ ಸಮಿತಿಯನ್ನು ಆರಂಭದಲ್ಲಿ ರಚನೆ ಮಾಡಲು ಡಿಕೆಶಿ ಮುಂದಾಗಿದ್ದಾರೆ. ಇದಾದ ಬಳಿಕ, ಜಿಲ್ಲಾ, ಬ್ಲಾಕ್ ಹಾಗೂ ಬೂತ್ ಮಟ್ಟದ ಕಮಿಟಿ ರಚನೆ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುವುದು ಡಿಕೆಶಿ ತಂತ್ರಗಾರಿಕೆಯಾಗಿದೆ.
ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಕೊರೊನಾ ಪರಿಣಾಮ ಜನರು ಸಂಕಷ್ಟದಲ್ಲಿದ್ದಾರೆ. ಇದೇ ಸಂದರ್ಭವನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ರಾಜ್ಯ ಪ್ರವಾಸಕ್ಕೂ ಡಿಕೆಶಿ ಚಿಂತನೆ ನಡೆಸುತ್ತಿದ್ದಾರೆ.