ಮಂಗಳೂರಿನಲ್ಲಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿ | ಏಪ್ರಿಲ್ 20 ರ ವರೆಗೆ ನೈಟ್ ಕರ್ಫ್ಯೂ

ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಏ.20ರ ವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ, ಉಳಿದೆಲ್ಲ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಪತ್ತು ನಿರ್ವಹಣೆ ಕಾಯ್ದೆಯ ಅನ್ವಯ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಏಪ್ರಿಲ್ 20 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಕೆಲವು ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಲಾಗಿದೆ. ಉಳಿದಂತೆ ಎಲ್ಲ ಸೇವೆ ಹಾಗೂ ಸಂಚಾರವನ್ನು ನಿಷೇಧಿಸಲಾಗಿದೆ ಎಂದರು.

ದೂರ ಸಂಪರ್ಕ ಮತ್ತು ಅಂತರ್ಜಾಲ ಸೇವೆ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿ ರಾತ್ರಿ ಪಾಳಿಯಲ್ಲಿ ಕಚೇರಿ ಗುರುತಿನ ಚೀಟಿ ತೋರಿಸಿದರೆ ಮಾತ್ರ ಸಂಚರಿಸಬಹುದು ಎಂದು ವಿವರಿಸಿದರು.

ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವಂತಹ ಎಲ್ಲ ಕಾರ್ಖಾನೆಗಳು, ಕಂಪನಿಗಳು ಹಾಗೂ ಸಂಸ್ಥೆಗಳು ಯಥಾರೀತಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಕಾರ್ಮಿಕರು ಹಾಗೂ ನೌಕರರು ಕರ್ಫ್ಯೂ ಅವಧಿಗೆ ಮುನ್ನವೇ ಅಂದರೆ ರಾತ್ರಿ ಒಳಗೆ ಗಮ್ಯ ಹಾಜರಿರಬೇಕು. ರಾತ್ರಿ ವೇಳೆ ಬಸ್, ರೈಲು ಹಾಗೂ ವಿಮಾನದಲ್ಲಿ ದೂರ ಪ್ರಯಾಣಕ್ಕೆ ಅನುಮತಿಸಿದ್ದು, ಪ್ರಯಾಣಿಕರು ಅಧಿಕೃತ ಟಿಕೆಟ್ ತೋರಿಸಿ ಸಂಚರಿಸಬಹುದು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಡಿಓ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ಸೋಂಕಿತ ವ್ಯಕ್ತಿಗಳು ಹೋಮ್ ಐಸೋಲೇಶನ್ ನಲ್ಲಿ ಇರುವಾಗ ಅವರ ಮೇಲೆ ನಿಗಾ ವಹಿಸಬೇಕು. 45 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಕೋವಿಡ್ ರೋಗನಿರೋಧಕ ಲಸಿಕೆ ಪಡೆದುಕೊಳ್ಳುವಂತೆ ಸೂಚಿಸಬೇಕು ಎಂದರು.

ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿ ಸೇರಿದಂತೆ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು. ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳ ನಿಯಂತ್ರಣಕ್ಕೆ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಆಗಿಂದಾಗ್ಗೆ ಹೊರಡಿಸುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ಅವುಗಳನ್ನು ಪಾಲಿಸಬೇಕು. ಈ ಮೂಲಕ ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಆರೋಗ್ಯ ಇಲಾಖೆಯವರು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದರೊಂದಿಗೆ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು. ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಗುರುತಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಕಫ್ರ್ಯೂ ನಿಯಮಗಳು ಸೇರಿದಂತೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವಿಕೆ ಕಡ್ಡಾಯವಾಗಿದ್ದು, ಪ್ರತಿಯೊಬ್ಬರೂ ಚಾಚೂತಪ್ಪದೆ ಪಾಲಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು, ದಂಡ ವಿಧಿಸಬೇಕು ಎಂದರು.

ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಇಬ್ಬರು ಹೋಮ್ ಗಾರ್ಡ್ ಗಳನ್ನು ನಿಯೋಜಿಸಿ, ಬೇರೆ ರಾಜ್ಯ, ಜಿಲ್ಲೆಗಳಿಂದ ಬರುವ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ವರದಿ ತರುವಂತೆ ನೋಡಿಕೊಳ್ಳಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.