ಜನರು ಸಹಕರಿಸುತ್ತಿಲ್ಲದ ಕಾರಣ ಲಾಕ್ ಡೌನ್ ಅನಿವಾರ್ಯ ? | ಏನಂದರು ಮುಖ್ಯಮಂತ್ರಿ ಯಡಿಯೂರಪ್ಪ ?!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವೇಳೆ ಲಾಕ್ ಡೌನ್ ಮಾಡುವ ಅನಿವಾರ್ಯತೆ ಎದುರಾದರೆ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ ಆಗುತ್ತದೆ. ಈ ಬಗ್ಗೆ ಸರ್ವಪಕ್ಷ ಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಕ್ರಮ ಅನುಸರಿಸಬೇಕು. ನಮಗೆ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ. ಜನರು ಸಹಕಾರ ನೀಡಿದಿದ್ದರೆ ಕೊರೊನಾ ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇನ್ನೊಂದು ಕಡೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮೇ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಲಿದೆ. ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಕೋವಿಡ್ ನಿಯಂತ್ರಣ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೇ ತಿಂಗಳ ಕೊನೆವರೆಗೂ ಎಲ್ಲರೂ ಎಚ್ಚರಿಕೆಯಿಂದಿರಬೇಕು. ಮೇ ಮೊದಲ ವಾರದಲ್ಲಿ ಕೊರೊನಾ ಗರಿಷ್ಠ ಮಟ್ಟ (ಪೀಕ್) ತಲುಪಬಹುದು.
ಮೇ ತಿಂಗಳ ಅಂತ್ಯಕ್ಕೆ ಸ್ವಲ್ಪ ಕಡಿಮೆಯಾಗಬಹುದು. ಹೆಚ್ಚು ಪ್ರಕರಣ ಕಂಡುಬಂದರೆ ಅದಕ್ಕೆ ತಕ್ಕಂತೆ ಆಸ್ಪತ್ರೆ ಹಾಸಿಗೆ ಬೇಡಿಕೆ ಹೆಚ್ಚಾಗುತ್ತದೆ. ಇದಕ್ಕಾಗಿ ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆಯಬೇಕು. ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಪ್ರಯಾಣಿಕರನ್ನು ಪರೀಕ್ಷಿಸುವ ಹಾಗೂ ಪರೀಕ್ಷಾ ವರದಿ ಪರಿಶೀಲಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಸಮರ್ಪಕವಾಗಿ ಚರ್ಚಿಸಲಾಗುವುದು. ಇದನ್ನು ಪರಿಗಣಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಖಾಸಗಿ ಆಸ್ಪತ್ರೆಗಳು ಕೂಡ ಸರ್ಕಾರೊಂದಿಗೆ ಕೆಲಸ ಮಾಡಿವೆ. ಟೆಲಿ ಐಸಿಯು ವ್ಯವಸ್ಥೆ ಮೊದಲಿಗೆ ನಮ್ಮ ಸರ್ಕಾರ ಆರಂಭಿಸಿದ್ದು, ಖಾಸಗಿ ಆಸ್ಪತ್ರೆಗಳು ಉಚಿತವಾಗಿ ಈ ಸೇವೆ ನೀಡಿವೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸಬೇಕಿದೆ. ಆರ್ಥಿಕ ಚಟುವಟಿಕೆಗೆ ತೊಂದರೆಯಾಗುವ ಯಾವುದೇ ಸಲಹೆ ನೀಡುವುದಿಲ್ಲ, ಆದರೆ ಗುಂಪುಗೂಡದಂತೆ ಕ್ರಮ ವಹಿಸಬೇಕೆಂದು ತಜ್ಞರು ಒತ್ತಿ ಹೇಳಿದ್ದಾರೆ ಎಂದವರು ತಿಳಿಸಿದ್ದಾರೆ.