ನಿಘಂಟು ತಜ್ಞ ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ
ಬೆಂಗಳೂರು: ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಸೋಮವಾರ ಮುಂಜಾನೆ 1.30ರ ಸುಮಾರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋ ಸಹಜ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ.
ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರಾಗಿ ಗುರುತಿಸಿಕೊಂಡಿದ್ದರು.
ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಪಡೆದುಕೊಂಡಿದ್ದರು.
ಬಳಿಕ ಮೈಸೂರು ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಪಡೆದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಇವರು.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಇವರಿಗೆ ಸಲ್ಲುತ್ತದೆ.