ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ, ಕಾಂಗ್ರೆಸ್ ಗೆ ಹೀನಾಯ ಸೋಲು | ಬಳ್ಳಾರಿಯಲ್ಲಿ ಅಧಿಕಾರ ಹಿಡಿದ ಖುಷಿಯಲ್ಲಿ ಕಾಂಗ್ರೆಸ್ !
ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನೊಂದಿಗೆ, ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದ್ದು ನಗರ ಸಭೆ ಬಿಜೆಪಿಯ ಪಾಲಾಗಿದೆ.
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಎಸ್ ಡಿಪಿಐ 5 ಸ್ಥಾನಗಳನ್ನು ಗೆಲ್ಲುವ ಮೂಲಕ ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಿ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.
ನಗರ ಸಭೆಯ ಒಟ್ಟು 23 ಸ್ಥಾನಗಳ ಪೈಕಿ 16 ಸ್ಥಾನ ಗಳಿಸಿರುವ ಬಿಜೆಪಿ, ನಗರ ಸಭೆಯ ಅಧಿಕಾರವನ್ನು ತನ್ನ ಕೈವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರಮುಖ ವಿರೋಧ ಪಕ್ಷವಾಗಿ ಎಸ್ ಡಿಪಿಐ ಕಾರ್ಯನಿರ್ವಹಿಸಲಿದೆ.
ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ 8, ಕಾಂಗ್ರೆಸ್ 10, ಜೆಡಿಎಸ್ 1, ಎಸ್ ಡಿಪಿಐ 4 ಸ್ಥಾನಗಳಲ್ಲಿ ಜಯಗಳಿಸಿತ್ತು.
ಆದರೆ ಈ ಬಾರಿ ಕಾಂಗ್ರೆಸ್ ಗೆ ಕೇವಲ 1 ಸ್ಥಾನಗಳನ್ನು ಗಳಿಸಲಷ್ಟೇ ಸಾಧ್ಯವಾಗಿದೆ. ಎಸ್ ಡಿಪಿಐ ಒಟ್ಟು 9 ಸ್ಥಾನಗಳಲ್ಲಿ ಸ್ಪರ್ಧಿಸಿ 5 ಸ್ಥಾನ ಪಡೆದುಕೊಂಡಿದೆ. ಉಳಿದಂತೆ ಜೆಡಿಎಸ್ ಒಂದು ಸ್ಥಾನ ಪಡೆದು ಯಥಾಸ್ಥಿತಿ ಕಾಪಾಡಿಕೊಂಡಿದೆ.
ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ
ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್ ಗಳ ಪೈಕಿ ಕಾಂಗ್ರೆಸ್ 21 ಸ್ಥಾನ ಪಡೆದರೆ, ಬಿಜೆಪಿ 13 ಸ್ಥಾನಗಳನ್ನು ಪಡೆದುಕೊಂಡಿದ್ದು, ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ.