ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳ ಮನೆ ಮನಗಳಲ್ಲಿ ವಿಶ್ವ ಪರಿಸರ ದಿನಾಚರಣೆ

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾಲಯದ ಹಿರಿಯ ಸಹ ಶಿಕ್ಷಕಿ ಶ್ರೀಮತಿ ಎವ್ಲಿನ್ ಪಾಯಸ್ ಇವರು ಶಾಲಾ ಆವರಣದಲ್ಲಿ ಗಿಡವನ್ನು ನೆಡುವ ಮೂಲಕ ಮುಂದಿನ ಶೈಕ್ಷಣಿಕ ವರ್ಷದ ಕಾರ್ಯಯೋಜನೆಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಯುತ ಜೋಸ್ ಎಂ.ಜೆ ಯವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ಕುರಿತು ವಿಡಿಯೋ ಮೂಲಕ ಸಂದೇಶವನ್ನು ರವಾನಿಸಿದರು.

 

ಕೊರೋನಾದಂತಹ ಸಾಂಕ್ರಮಿಕ ರೋಗಗಳು ಎಲ್ಲೆಡೆ ಹಬ್ಬುತ್ತಿರುವ ಈ ಸಂದರ್ಭದಲ್ಲಿ ರೋಗಿಗಳು ಆಮ್ಲಜನಕ ಕೊರತೆಯನ್ನು ಎದುರಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾವು ಶುದ್ಧಗಾಳಿಯನ್ನು ಪಡೆಯ ಬೇಕಾದರೆ ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವುದು ಅತೀ ಅಗತ್ಯ. ಇದನ್ನು ಮನಗಂಡು ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಪರಿಸರದಲ್ಲಿ ಒಂದೊಂದು ಗಿಡ ನೆಡುವ ಮೂಲಕ ಎಲ್ಲರೂ ಪರಿಸರಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡೋಣ ಎಂದರು.


ಇದೇ ಸಂದರ್ಭದಲ್ಲಿ ಸಂಸ್ಥೆಯ ಸುಮಾರು ಒಂದು ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕ- ಶಿಕ್ಷಕೇತರ ವೃಂದದವರು ತಮ್ಮ ತಮ್ಮ ಮನೆಯ ಪರಿಸರದಲ್ಲಿ ತಲಾ ಒಂದೊಂದು ಗಿಡವನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು.
ಪ್ರಸಕ್ತ ವಿದ್ಯಮಾನದಲ್ಲಿ ಶಾಲಾರಂಭವು ಅನಿಶ್ಚಿತತೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯಪೂರಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ಇಂದ್ರಪ್ರಸ್ಥ ವಿದ್ಯಾಲಯವು ಮುಂದಿನ ಶೈಕ್ಷಣಿಕ ವರ್ಷಕ್ಕೆ ಹಲವಾರು ವಿನೂತನ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ವಿದ್ಯಾರ್ಥಿಗಳು ತಾವು ನಿರ್ವಹಿಸಿರುವ ಎಲ್ಲಾ ಚಟುವಟಿಕೆಗಳನ್ನು ಪ್ರತ್ಯೇಕವಾಗಿ ದಾಖಲಿಸಿಕೊಂಡು ಸಂಸ್ಥೆಯ ಶಿಕ್ಷಕರಿಗೆ ನೀಡಲಿದ್ದಾರೆ. ಹೀಗೆ ವಿದ್ಯಾರ್ಥಿಗಳು ನಿರಂತರವಾಗಿ ತಮ್ಮನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲಾಗುವುದು ಎಂದು ವಿದ್ಯಾಲಯದ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

Leave A Reply

Your email address will not be published.