ಉಡುಪಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳು ದೋಷಿ

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ(52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಪತ್ನಿ, ಮಗ ಸಹಿತ ಮೂವರು ಆರೋಪಿಗಳು ದೋಷಿಗಳು ಎಂದು ಆದೇಶ ನೀಡಿದೆ.

ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿರುವ ಆರೋಪಿಗಳಾಗಿದ್ದಾರೆ. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಇಂದು ಮಧ್ಯಾಹ್ನ ನ್ಯಾಯಾಲಯದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಪ್ರಕಟಿಸಲಿದ್ದಾರೆ.

ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ.

ಸದ್ಯ ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಲಭಿಸಿದ್ದರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿತ್ತು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಕೊಲೆ ಪ್ರಕರಣವನ್ನು ಬಯಲಿಗೆಳೆದಿದ್ದು, ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಬಂಧಿಸಿದ್ದರು.

Leave A Reply

Your email address will not be published.