ಜೂನ್ 13,14 ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ರೆಡ್ ಜೋನ್ ನತ್ತ ದಕ್ಷಿಣ ಕನ್ನಡ ಸಹಿತ ಕೆಲ ಜಿಲ್ಲೆಗಳು ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿ ವಾರ ಕಳೆದಿದೆ, ಕೆಲ ಕಡೆ ಈಗಾಗಲೇ ಹಲವು ಅನಾಹುತಗಳು ನಡೆದೇ ಹೋಗಿದೆ.ಆದರೆ ರಾಜ್ಯದ ಬಹುತೇಕ ಕಡೆಗಳಲ್ಲಿ ಇನ್ನೂ ಮಳೆಯಾಗಿಲ್ಲ.
ಕೆಲ ಜಿಲ್ಲೆಗಳಲ್ಲಿ ದಿನಕ್ಕೊಂದೆರಡು ಮಳೆ ಸುರಿಯುತ್ತಿದೆ.ಅದರಂತೆ ಜೂನ್ 13 ರಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 13 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಂಭವಿವಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 14 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳ ಬಳಿಕ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಜನತೆ ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ಸೂಚಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 3 ದಿನ ಗುಡುಗು ಸಿಡಿಲು ಸಹಿತ ಮಳೆ ಬೀಳಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯು ಹೆಚ್ಚಿದೆ ಎಂದೂ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿಯನ್ನು ಈಗಾಗಲೇ ನಿಯೋಜನೆ ಮಾಡಲಾಗಿದೆ.