ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಆಗಮಿಸುವ ವಾಹನಗಳ ಮುಟ್ಟುಗೋಲು | ಎರಡು ವಾರ ಧಾರ್ಮಿಕ ಕೇಂದ್ರ ತೆರೆಯಲು ನಿರ್ಬಂಧ
ಮಂಗಳೂರು, ಜೂ.19: ದ.ಕ. ಜಿಲ್ಲೆಯಲ್ಲಿ ಅನ್‌ಲಾಕ್ ಮಾಡುವ ಕುರಿತು ರಾಜ್ಯ ಸರಕಾರ ತೀರ್ಮಾನ ಪ್ರಕಟಿಸಿದ ಬಳಿಕ ಜಿಲ್ಲಾಡಳಿತ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಶನಿವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂ.21ರ ಬಳಿಕ ಅನ್‌ಲಾಕ್ ಮಾಡುವ ಬಗ್ಗೆ ಇನ್ನೂ ತಿರ್ಮಾನವಾಗಿಲ್ಲ. ರಾಜ್ಯ ಸರಕಾರದ ಹಂತದಲ್ಲಿ ತೀರ್ಮಾನವಾಗಬೇಕಾಗಿದೆ. ಜಿಲ್ಲೆಯಲ್ಲಿ ಯಾವ ರೀತಿಯಲ್ಲಿ ಮುಂದಿನ ಅನ್‌ಲಾಕ್ ಮಾಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಮುಖ್ಯಮಂತ್ರಿಯ ಜೊತೆ ಸಮಾಲೋಚನೆ ಮಾಡಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ ಧಾರ್ಮಿಕ ಕ್ಷೇತ್ರಗಳನ್ನು ಮುಂದಿನ 2 ವಾರ ತೆರೆಯುವಂತಿಲ್ಲ. ಈ ಕುರಿತು ಈಗಾಗಲೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಈಗಾಗಲೆ ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಆಗಮಿಸುವ ವಾಹನಗಳನ್ನು ಮುಟ್ಟುಗೋಲು ಹಾಕಲು ಸೂಚನೆ ನೀಡಲಾಗಿದೆ. ಅಲ್ಲದೆ ಚಾರ್ಮಾಡಿ ಮತ್ತು ಪೆರಿಯಶಾಂತಿ ಎಂಬಲ್ಲಿ ಹೆಚ್ಚುವರಿ ಚೆಕ್‌ಪೋಸ್ಟ್ ಮೂಲಕ ತಪಾಸಣೆಗೆ ಪೊಲೀಸ್ ಇಲಾಖೆಗೆ ನಿದೇರ್ಶನ ನೀಡಲಾಗಿದೆ. ಈಗಾಗಲೆ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತರ ಭೇಟಿಯ ಕುರಿತು ದೂರಿನ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು.
ಪ್ರಸ್ತುತ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳನ್ವಯ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳೂ ಒಳಗೊಂಡಂತೆ ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿರುತ್ತದೆ. ಆದೇಶವನ್ನು ಉಲ್ಲಂಘಿಸಿ ಯಾವುದೇ ವ್ಯಕ್ತಿಗಳು ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಯಾವುದೇ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದಲ್ಲಿ ಅಂತಹ ವ್ಯಕ್ತಿಗಳು ಸಂಚಾರಕ್ಕೆ ಬಳಸುವ ವಾಹನವನ್ನು ಮುಟ್ಟುಗೋಲು ಹಾಕಲಾಗುವುದು. ಯಾವುದೇ ಧಾರ್ಮಿಕ ಕೇಂದ್ರಗಳು ಸಾರ್ವಜನಿಕರ ಪ್ರವೇಶಕ್ಕೆ ಹಾಗೂ ವಸತಿಗೆ ಅವಕಾಶ ನೀಡಿದ್ದಲ್ಲಿ ಅಂತಹ ಧಾರ್ಮಿಕ ಕೇಂದ್ರಗಳ ಆಡಳಿತಾಧಿಕಾರಿಗಳ ವಿರುದ್ಧ ಕ್ರಮವಹಿಸಲಾಗುವುದು. ಯಾವುದೇ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ ಸಾರ್ವಜನಿಕರು ಹಾಗೂ ಧಾರ್ಮಿಕ ಕೇಂದ್ರಗಳ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2021 ಕಲಂ 5(3), 6(1) (2) ರನ್ವಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51, 58 ರನ್ವಯ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯಿಂದಾಗಿ ಸ್ಥಗಿತಗೊಂಡಿರುವ ಚಟುವಟಿಕೆಗಳನ್ನು ಪುನರಾರಂಭಿಸಲು, ಕೋವಿಡ್ ಪಾಸಿಟಿವಿಟಿ ದರವನ್ನು ಕಡಿಮೆಗೊಳಿಸುವುದು ಹಾಗೂ ಜಿಲ್ಲೆಯನ್ನು ಕೋವಿಡ್ ಮುಕ್ತವನ್ನಾಗಿಸುವುದು ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು, ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.