ರಾಜ್ಯ ಸಭಾ ಸದಸ್ಯ ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆಸ್ಪತ್ರೆಗೆ ದಾಖಲು, ಐಸಿಯುಗೆ ಶಿಫ್ಟ್
ಮಂಗಳೂರು ಜು.20: ರಾಜ್ಯ ಸಭಾ ಸದಸ್ಯ ರಾಷ್ಟ್ರೀಯ ಕಾಂಗ್ರೆಸ್ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುತ್ತಿದ್ದ ಸಂದರ್ಭ ಜಾರಿ ಬಿದ್ದು ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮೊನ್ನೆ ಜು.18 ರಂದು ಬೆಳಗ್ಗೆ ಅವರು ಯೋಗ ಮಾಡುತ್ತಿದ್ದಾಗ ಆಯ ತಪ್ಪಿ ಬಿದ್ದಿದ್ದರು. ಆರಂಭದಲ್ಲಿ ಸಣ್ಣ ಪ್ರಮಾಣದಲ್ ಗಾಯವೆಂದು ನಿರ್ಲಕ್ಷಿಸಿಸಲಾಗಿತ್ತು. ಅಂದು ಸಂಜೆ ಮಾಮೂಲಿ ಆರೋಗ್ಯ ತಪಾಸಣೆಗೆಂದು ಅವರು ನಗರದ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ವೈದ್ಯರು ಅವರನ್ನು ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು
ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಆರೋಗ್ಯದಲ್ಲಿ ಏರು ಪೇರಾಗಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ತೀವ್ರನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಆಸ್ಕರ್ ಫೆರ್ನಾಂಡಿಸ್ ಅವರಿಗೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿದೆ ಎಂಬುದಾಗಿ ವೈದ್ಯರು ಹೇಳಿದ್ದು, ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಆಸ್ಕರ್ ಫೆರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆ ಕಡೆಗೆ ಉಡುಪಿ, ದ.ಕ ಜಿಲ್ಲಾ ಕಾಂಗ್ರೆಸ್ ನ ನಾಯಕರು ತೆರಳಿದ್ದಾರೆ ಎಂದು ತಿಳಿದು ಬಂದಿದೆ.