ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮಾಜಿ ಶಾಸಕರಾದ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಮನೆಗೆ ಇಡಿ ದಾಳಿ | ಬೆಚ್ಚಗೆ ಮಲಗಿದ್ದ ಮಾಜಿ ಸಚಿವರಿಬ್ಬರಿಗೆ ಇಡಿ ಶಾಕ್
ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಳಗಿನ ಜಾವ 5.45 ರ ಸುಮಾರಿಗೆ ಜಮೀರ್ ಅಹಮ್ಮದ್ ಅವರ ನಿವಾಸ, ಕಚೇರಿ ಮತ್ತು ಫ್ಲ್ಯಾಟ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಮನೆ ಸೇರಿದಂತೆ ಬೆಂಗಳೂರಿನ ಆರು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್‌ರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಐಎಂಎ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರು ಈ ಹಿಂದೆ ಸರ್ಕಾರದ ಅನುಮತಿ ಕೋರಿದ್ದರು. ಇದೀಗ ಇಡಿ ಅಧಿಕಾರಿಗಳು ರೋಷನ್‌ಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ಜಮೀರ್ ಅಹ್ಮದ್ ಮನೆಗೆ ಅಧಿಕಾರಿಗಳು ಎರಡು ಕಾರುಗಳಲ್ಲಿ ಬಂದಿದ್ದು, ಜಮೀರ್ ಅಹ್ಮದ್ ಸಹ ಮನೆಯಲ್ಲೇ ಇದ್ದಾರೆ ಎಂದು ತಿಳಿದು ಬಂದಿದೆ.
ಜಮೀರ್ ಅವರು ಈತ್ತೀಚೆಗಷ್ಟೇ ತಮ್ಮ ಪುತ್ರಿಯ ಮದುವೆಯನ್ನು ಭರ್ಜರಿಯಾಗಿ ಮಾಡಿದ್ದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸಮಾರಂಭ ಏರ್ಪಡಿಸಿದ್ದರು. ಇಷ್ಟೇ ಅಲ್ಲದೇ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ವಿಶಾಲವಾದ ಜಾಗದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅನಾಮಧೇಯ ಮೂಲಗಳಿಂದ ಮಾಹಿತಿ ಸಂಗ್ರಹ ಮಾಡಿತ್ತು. ಜಮೀರ್ ಕಳೆದ ಹಣಕಾಸು ವರ್ಷದಲ್ಲಿ ಘೋಷಿಸಿಕೊಂಡ ಆಸ್ತಿಗಿಂತ ದುಪ್ಪಟ್ಟು ಆಸ್ತಿ ಹೊಂದಿರುವ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು.