ಹಂತ ಹಂತವಾಗಿ ಪಿಯು ಕಾಲೇಜು ಆರಂಭಿಸಲು ದ.ಕ ಜಿಲ್ಲಾಡಳಿತ ನಿರ್ಧಾರ -ಡಾ.ಕೆ.ವಿ.ರಾಜೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಸದ್ಯ ಸ್ವಲ್ಪಮಟ್ಟಿಗೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳನ್ನು ಹಂತ ಹಂತವಾಗಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಲೆಗಳ ಆರಂಭ ಕುರಿತು ಸದ್ಯಕ್ಕೆ ಯೋಚನೆ ಮಾಡಿಲ್ಲ. ಆದರೆ ಪಿಯು ತರಗತಿಗಳನ್ನು ಹಂತಹಂತವಾಗಿ ತೆರೆಯಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಸೋಮವಾರ ಜನಪ್ರತಿನಿಧಿಗಳೊಂದಿಗೆ ಸಭೆಯೂ ನಡೆದಿದೆ.

ಪಿಯು ತರಗತಿಗಳು ಆರಂಭಗೊಂಡ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳನ್ನು ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಕೋವಿಡ್ ನಿಯಮ ಪಾಲನೆಗೆ ವಿಶೇಷ ಆದ್ಯತೆ ನೀಡುವುದರೊಂದಿಗೆ ಪಿಯು ತರಗತಿಗಳಿಗೆ ವಿದ್ಯಾರ್ಥಿಗಳನ್ನು ಹಂತ ಹಂತವಾಗಿ ಬರಮಾಡಿಕೊಳ್ಳಲಾಗುವುದು. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಕೋವಿಡ್ ಪರೀಕ್ಷೆ ಸೇರಿದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸದ್ಯ ಪ್ರತಿ ದಿನ ೧೪ ಸಾವಿರ ಕೋವಿಡ್ ಟೆಸ್ಟ್‌ಗಳಾಗುತ್ತಿವೆ. ಇದನ್ನು ಇನ್ನಷ್ಟು ಹೆಚ್ಚು ಮಾಡಲು ನಿರ್ಧರಿಸಲಾಗಿದೆ.

ಆದಷ್ಟು ಟೆಸ್ಟ್ ಆದರೆ ಒಳ್ಳೆಯದು. ಪಾಸಿಟಿವ್ ಕಂಡುಬಂದರೂ ಅದನ್ನು ನಿಭಾಯಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೇರಳದಿಂದ ಆಗಮಿಸಿದ ವಿದ್ಯಾರ್ಥಿಗಳ ಪೈಕಿ ಸುಮಾರು ೯೦೦ರಷ್ಟು ವಿದ್ಯಾರ್ಥಿಗಳು ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದರೂ ಬಳಿಕ ಕೋವಿಡ್ ಪಾಸಿಟಿವ್ ಕಂಡುಬಂದಿದೆ.ಆ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಯಾವರೀತಿ ವ್ಯವಸ್ಥೆ ಮಾಡಿದೆ? ಎಲ್ಲೆಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದು ನಿಯಮ ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದವರು ತಿಳಿಸಿದರು.

Leave A Reply

Your email address will not be published.