ದ.ಕ : ಸೆ.1ರಿಂದ ದ್ವಿತೀಯ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಧಿಕಾರಿ ನಿರ್ದೇಶನ
ದ.ಕ.ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದ್ದಾರೆ.
ಪ್ರಥಮ ಪಿಯು ತರಗತಿಯನ್ನು ಪಿಯು ಡಿಡಿ ಹಾಗೂ ಪದವಿ/ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಕಾಲೇಜಿನ ಜಂಟಿ ನಿರ್ದೇಶಕರ ಪೂರ್ವಾನುಮತಿ ಪಡೆದು ಸೆ.15ರ ಬಳಿಕ ತರಗತಿ ಆರಂಭಿಸುವ ಬಗ್ಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ)ವನ್ನು ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ವಹಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು 7 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಿಸಲು ಮತ್ತು ಕೋವಿಡ್ ಸೋಂಕು ತಗಲಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಆರೈಕೆ ಮಾಡಲು ಕಾಲೇಜುಗಳಲ್ಲೇ ವಸತಿ ಸಹಿತ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್‌ಗಳನ್ನು ಕಡ್ಡಾಯವಾಗಿ ತೆರೆಯಬೇಕು. 7 ದಿನಗಳ ಕ್ವಾರಂಟೈನ್ ಮುಗಿಸಿದ ವಿದ್ಯಾರ್ಥಿಗಳು ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರದೊಂದಿಗೆ ತರಗತಿಗೆ ಹಾಜರಾಗಬಹುದಾಗಿದೆ. ಕ್ವಾರಂಟೈನ್‌ನಲ್ಲಿರುವ ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್‌ನಲ್ಲೇ ಆನ್‌ಲೈನ್ ತರಗತಿಯಲ್ಲಿ ಭಾಗವಹಿಸುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಎಲ್ಲಾ ಭೋದಕ ಮತ್ತು ಭೋದಕೇತರ ಸಿಬ್ಬಂದಿ ವರ್ಗವು ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರದೊಂದಿಗೆ ಶಿಕ್ಷಣ ಸಂಸ್ಥೆಗೆ ಹಾಜರಾಗಬಹುದಾಗಿದೆ. ವಸತಿ ನಿಲಯದ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸಬೇಕು ಎಂದು ಡಿಸಿ ತಿಳಿಸಿದ್ದಾರೆ.
ಕೇರಳದಿಂದ ಪ್ರತೀ ದಿನ ಬರುವ ವಿದ್ಯಾರ್ಥಿಗಳು 7 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರದೊಂದಿಗೆ ತರಗತಿಗೆ ಹಾಜರಾಗಬಹುದಾಗಿದೆ. ಕೇರಳದಿಂದ ಪ್ರತೀ ದಿನ ಬರುವ ಭೋದಕ ಮತ್ತು ಭೋದಕೇತರ ಸಿಬ್ಬಂದಿ ವರ್ಗವು (ಎರಡು ಡೋಸ್ ಪಡೆದಿದ್ದರೂ ಕೂಡ) ಪ್ರತೀ 7 ದಿನಗಳಿಗೊಮ್ಮೆ ಆರ್‌ಟಿ ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರದೊಂದಿಗೆ ಶಿಕ್ಷಣ ಸಂಸ್ಥೆಗೆ ಹಾಜರಾಗಬಹುದಾಗಿದೆ.
ಎಸ್‌ಒಪಿ ಪರಿಪಾಲನೆಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಡಿಡಿಪಿಯು, ತಾಲೂಕು ಆರೋಗ್ಯಧಿಕಾರಿಗಳು, ಆಯಾ ಕಾಲೇಜುಗಳ ಪ್ರಾಂಶುಪಾಲ ರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ವೈದ್ಯಕೀಯ ಪ್ಯಾರಾ ಮೆಡಿಕಲ್ ನರ್ಸಿಂಗ್ ಕಾಲೇಜಿಗೆ ಸಂಬಂಧಿಸಿ ಈಗಾಗಲೆ ನೀಡಿದ ನಿರ್ದೇಶನದಂತೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ತೆರೆದು ಒಂದು ವಾರದ ಕ್ವಾರಂಟೈನ್ ಹಾಗೂ ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲು ಕ್ರಮ ವಹಿಸಬೇಕು. 7 ದಿನದ ನಂತರ ಮತ್ತೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿ ಬಂದಲ್ಲಿ ಮಾತ್ರ ಭೌತಿಕ ತರಗತಿಗಳನ್ನು ನಡೆಸಲು ಕ್ರಮ ಜರಗಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.