ಕರಾವಳಿಯಲ್ಲಿ ಬಿರುಸುಗೊಂಡ ಮುಂಗಾರು | ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆ | ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಸೆಪ್ಟೆಂಬರ್​ ತಿಂಗಳಿನಲ್ಲಿ ಮುಂಗಾರು ಬಿರುಸು ಪಡೆದುಕೊಂಡಿದ್ದು, ಈ ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಹಾಗೆಯೇ ಇಂದಿನಿಂದ ಮಳೆಯ ತೀವ್ರತೆ ಇನ್ನೂ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ (Yellow Alert) ಘೋಷಿಸಲಾಗಿದೆ. ಜೊತೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇಂದು ಕರಾವಳಿ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ,ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಉಡುಪಿ, ಕುಂದಾಪುರ, ಬೈಂದೂರು, ಹುಲಿಕಲ್, ಹಾಲಾಡಿ, ಕಾರ್ಕಳ, ಮಣಿಪಾಲ ಮುಂತಾದೆಡೆಯೂ ಸತತ ಮಳೆ ಸುರಿಯುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೂ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕರ್ನಾಟಕದ ಹಾಗೂ ಹೈದ್ರಾಬಾದ್ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಮೇತ ಮಳೆಯಾಗಲಿದೆ. ರಾಜ್ಯದ ಕೆಲ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಸರ್ಕಾರ ಈಗಾಗಲೇ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಿದೆ.

Leave A Reply

Your email address will not be published.