ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ನಿರ್ಧಾರ | ರಾಜಕೀಯ ಪ್ರವೇಶ ಮಾಡಲಿದ್ದಾರಾ ಐಪಿಎಸ್ ಅಧಿಕಾರಿ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿ, ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ರಾವ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.ನಿವೃತ್ತಿಗೆ ಇನ್ನೂ ಮೂರು ವರ್ಷ ಇರುವಾಗಲೇ ಸ್ವಯಂ ನಿವೃತಿ ಹೊಂದಲು ನಿರ್ಧರಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅವರು ನಿವೃತ್ತಿಗೆ ಮೂರು ವರ್ಷ ಬಾಕಿ ಇರುವಂತೆಯೇ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ (ಸ್ವಯಂ ನಿವೃತ್ತಿ) ನೀಡುತ್ತಿರುವುದಾಗಿ ಪತ್ರವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿ ಬಿ.ರವಿಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಆದರೆ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ.
ಬೆಂಗಳೂರು ಮೂಲದ ಭಾಸ್ಕರ್ ರಾವ್ 1990ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು, ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ದಕ್ಷಿಣ, ಉತ್ತರ ವಿಭಾಗ ಡಿಸಿಪಿಯಾಗಿದ್ದರು. ಬಳಿಕ ಸಾರಿಗೆ ಇಲಾಖೆ ಆಯುಕ್ತ, ಕೆಎಸ್ಆರ್ಟಿಸಿಯ ಭದ್ರತಾ ವಿಭಾಗ ನಿರ್ದೇಶಕ, ಬೆಳಗಾವಿ, ಮೈಸೂರು ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. 2019ರ ಆಗಸ್ಟ್ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು.
ಭಾಸ್ಕರ್ ರಾವ್ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದೆ. ಅವರು ಆಮ್ ಆದ್ಮಿ ಪಾರ್ಟಿ (ಆಪ್) ಅಥವಾ ಕಾಂಗ್ರೆಸ್ ಸೇರಿ ಬಸ ವನಗುಡಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.ಆದರೆ ಭಾಸ್ಕರ ರಾವ್ ಈ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದಿದ್ದಾರೆ.