ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಆರಂಭ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಪಾಸಿಟಿವಿಟಿ ದರ ಶೇ 0.66ರಷ್ಟಿದ್ದು, 6 ರಿಂದ 12ನೆ ತರಗತಿ ವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ, ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದಲ್ಲಿನ ಕೋವಿಡ್-19 ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ವನ್ನು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಲಾಗುವುದು. 6 ರಿಂದ 12ನೆ ತರಗತಿ ವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ, ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ದಸರಾ ಮಹೋತ್ಸವ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು. ಗಡಿ ಭಾಗದಲ್ಲಿ ಹೆಚ್ಚು ನಿಗಾ ವಹಿಸಲಾಗುವುದು. ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕಾ ಅಭಿಯಾನ ತೀವ್ರಗೊಳಿಸಲು, ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದರು.

ಕೋವಿಡ್ ಪಾಸಿಟಿವಿಟಿ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಕೆಲವೊಂದು ಮಾರ್ಗಸೂಚಿಗಳನ್ನು ಅನುಸರಿಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಚಿತ್ರಮಂದಿರಕ್ಕೆ ಬರುವವರು ಕೊವಿಡ್ ಒಂದು ಡೋಸ್ ಪಡೆದಿರುವುದು ಕಡ್ಡಾಯವಾಗಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಾದರೆ ಶೇ.50ರಷ್ಟು ಸೀಟ್ ಭರ್ತಿಗೆ ಮಾತ್ರ ಅವಕಾಶ, ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು, ಚಿತ್ರಮಂದಿರಕ್ಕೆ ಗರ್ಭಿಣಿಯರಿಗೆ, ಮಕ್ಕಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave A Reply

Your email address will not be published.