ರಾಜ್ಯದಲ್ಲಿ ಮತ್ತೆ ಆರ್ಭಟಿಸಲಿದ್ದಾನೆ ವರುಣ !! | ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ
ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆಯಿಂದ ಮುಂದಿನ ಐದು ದಿನ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ಡಿ. 3ರವರೆಗೆ ಭಾರೀ ಮಳೆಯಾಗುವ ಸಂಭವವಿದೆ.
ರಾಜ್ಯದಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರೈತರು ಅಕ್ಷರಶಃ ಹೈರಾಣಾಗಿದ್ದಾರೆ. ಬೇಸಿಗೆಯಲ್ಲಿ ಬರ , ಬಳಿಕ ಸುರಿದ ಮುಂಗಾರು ಮಳೆಯ ನೆರೆಯ ಹೊಡೆತಕ್ಕೆ ಸಿಲುಕಿ ನಲುಗಿದ್ದ ರೈತರು ಈಗಲಾದರೂ ಬೆಳೆ ಕೈಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಅಕಾಲಿಕವಾಗಿ ಸುರಿದ ಮಳೆ ವಿವಿಧೆಡೆ ಸಾಲ ಸೋಲ ಮಾಡಿ ಬೆಳೆ ಬೆಳೆದ ರೈತರ ನಿರೀಕ್ಷೆಗಳಿಗೆ ತಣ್ಣೀರೆರಚಿದೆ. ಕಷ್ಟ ಪಟ್ಟು ಬೆಳೆದ ಭತ್ತ, ಅಡಿಕೆ, ತೊಗರಿ, ಶುಂಠಿ, ಜೋಳ, ಟೊಮ್ಯಾಟೊ, ಈರುಳ್ಳಿ ಮೊದಲಾದ ಬೆಳೆಗಳು ನೀರುಪಾಲಾಗಿವೆ.