ಮಾಸ್ಕ್ ಧರಿಸದಿದ್ರೆ ಇನ್ಮುಂದೆ ನಗರ ಪ್ರದೇಶದಲ್ಲಿ ಮತ್ತು ಹಳ್ಳಿಗಳಲ್ಲಿ ದಂಡಾಸ್ತ್ರ ಫಿಕ್ಸ್ | ದಂಡದ ಮೊತ್ತ ಎಲ್ಲಿ ಎಷ್ಟು ಗೊತ್ತಾ ?!

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ಓಮಿಕ್ರಾನ್ ಕಂಟ್ರೋಲ್ ಮಾಡಲು ಸರ್ಕಾರ ದಂಡಾಸ್ತ್ರ ಪ್ರಯೋಗಿಸಲು ನಿರ್ಧರಿಸಿದೆ.

ಕೋವಿಡ್ ತಡೆಯಲು ರಾಜ್ಯ ಸರ್ಕಾರ, ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇಂದು ಕೃಷ್ಣಾದಲ್ಲಿ ಉನ್ನತಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಹತ್ತು ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡರು. ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು,18 ವರ್ಷ ಮೇಲ್ಪಟ್ಟ ಎಲ್ಲರಿಗೂ 2 ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದ್ದು, ಸಾರ್ವಜನಿಕ ಪ್ರದೇಶಗಳ ಬಳಕೆಗೆ ಡಬಲ್ ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದೆ.  ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದರೆ 250 ರೂ. ಮತ್ತು ಹಳ್ಳಿಗಳಲ್ಲಿ 100 ರೂ. ದಂಡ ಪ್ರಯೋಗಿಸಲು ನಿರ್ಧರಿಸಿದೆ.ಇದರೊಂದಿಗೆ ಮಾಸ್ಕ್ ಹಾಕದಿದ್ದರೆ ದಂಡ ವಿಧಿಸುವ ಕ್ರಮ ಮತ್ತೆ ಆರಂಭ ಆಗುತ್ತಿದೆ. ಸದ್ಯಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತಹ ಕ್ರಮಗಳನ್ನು ತೆಗೆದುಕೊಳ್ಳದಿರಲು ಸರ್ಕಾರ ನಿರ್ಧರಿಸಿದೆ.

ಸಭೆಯ ಮುಖ್ಯಾಂಶಗಳು:ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ  ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಬೊಮ್ಮಾಯಿ ತಿಳಿಸಿದರು.

ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್‍ಸಿಬಿಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು. ಇದರೊಂದಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೆಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್‌ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.

ಓಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗುವುದು. ಸರ್ಕಾರಿ ನೌಕರರಿಗೆ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಲಾಗುವುದು ಎಂದು ನಿರ್ಧರಿಸಲಾಗಿದೆ.ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ.100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು. ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ. ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗುವುದು.

ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ. ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

Leave A Reply

Your email address will not be published.