ಇಷ್ಟು ದಿನ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಲು ರೆಡಿ !! | ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕೆಲ ದಿನಗಳಿಂದ ರಾಜ್ಯದ ಜನರಿಗೆ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದು,ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನ ಚಿಕ್ಕಮಗಳೂರು , ಹಾಸನ, ಕೊಡಗು, ಶಿವಮೊಗ್ಗ ಮತ್ತು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆ ನೀಡಲಾಗಿದೆ.ಮಂಗಳವಾರದ ಬಳಿಕ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆ ಹಾಗೂ ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿ ಮೂರು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಮೂರು ದಿನ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹೇಳಲಾಗಿದೆ.ರಾಜ್ಯದ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಸಕ್ರಿಯವಾಗಿರುವುದು ಮತ್ತು ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರದೇಶ ಹಾಗೂ ಮೇಲ್ಮೈ ಸುಳಿಗಾಳಿ ಇರುವುದರಿಂದ ರಾಜ್ಯದಲ್ಲಿ ಮಳೆಯ ವಾತಾವರಣ ಇನ್ನಷ್ಟು ದಿನ ಮುಂದುವರಿಯಲಿದೆ.

Leave A Reply

Your email address will not be published.