ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.

ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳ ಆರಂಭವಾಗಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಗುಂಪು, ‘ವಿಶ್ವವಿದ್ಯಾಲಯದಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದು ಆಗ್ರಹಿಸಿದರು.ಪರೀಕ್ಷೆ, ಮೌಲ್ಯಮಾಪನ ಮತ್ತು ಫಲಿತಾಂಶ ನೀಡುವಲ್ಲಿ ವಿಶ್ವವಿದ್ಯಾಲಯ ವಿಳಂಬ ಧೋರಣೆ ಅನುಸರಿಸುತ್ತಿದೆ. ಮೌಲ್ಯಮಾಪನ ಆಗಿ ಹಲವು ದಿನಗಳು ಕಳೆದರೂ ಎಂ.ಕಾಮ್, ಎಂಸಿಎ, ಬಿ.ಎಸ್ಸಿ, ಎಂ.ಎಸ್ಸಿ, ಎಂ.ಎ, ಬಿ.ಇಡಿ ಹಾಗೂ ಎಂಬಿಎ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿಲ್ಲ. ಪರೀಕ್ಷೆ ಶುಲ್ಕವನ್ನೂ ದಿಢೀರ್ ಹೆಚ್ಚಳ ಮಾಡಲಾಗಿದೆ’ ಎಂದೂ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.’ಎಲ್ಲ ಕೋರ್ಸ್‌ಗಳ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು. ಪದವಿ ಅಂಕಪಟ್ಟಿ ಹಾಗೂ ಘಟಿಕೋತ್ಸವ ಪ್ರಮಾಣ ಪತ್ರ ನೀಡಬೇಕು. ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ 2015-2016ನೇ ಸಾಲಿನ ವಿದ್ಯಾರ್ಥಿಗಳಿಗೆ ಒಂದು ಬಾರಿ ನಿರ್ಗಮನ ಯೋಜನೆಯಡಿ ಪರೀಕ್ಷೆ ನಡೆಸಬೇಕು’ ಎಂದೂ ಪ್ರತಿಭಟನಕಾರರು ಒತ್ತಾಯಿಸಿದರು.

ಇದೇ ಸಂದರ್ಭದಲ್ಲೇ ‘ಬೆಂಗಳೂರು ವಿಶ್ವವಿದ್ಯಾಲಯ ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆ’ ನೇತೃತ್ವದಲ್ಲಿ ವಿದ್ಯಾರ್ಥಿಗಳ ಇನ್ನೊಂದು ಗುಂಪು, ‘ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ’ ಎಂದು ಆರೋಪಿಸಿ ಪ್ರತಿಭಟನೆ ಆರಂಭಿಸಿದ್ದರು.’ವಿಶ್ವವಿದ್ಯಾಲಯ ಆವರಣದಲ್ಲಿ ಯಾರು ಪ್ರತಿಭಟನೆ ನಡೆಸಬೇಕು?’ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ವಿಷಯವಾಗಿ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು,ಸಂಶೋಧನಾ ವಿದ್ಯಾರ್ಥಿಗಳು, ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮಧ್ಯಪ್ರವೇಶಿಸಿದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರು. ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ತಳ್ಳಾಟವಾಯಿತು.ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ಕೂಡ ಲಾಠಿ ಚಾರ್ಜ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಬಿವಿಪಿ ಸಂಘಟನೆಯ 20ಕ್ಕೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

1 Comment
  1. e-commerce says

    Wow, awesome weblog format! How long have you been blogging
    for? you make running a blog look easy. The whole glance of your website is great, as well
    as the content! You can see similar here sklep

Leave A Reply

Your email address will not be published.