ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಹೆಗ್ಗಡೆಯವರ ಬಗ್ಗೆ ಅಪಪ್ರಚಾರ | ಸೋಮನಾಥ್ ನಾಯಕ್‌‌ಗೆ ಶಿಕ್ಷೆ ರದ್ದು ಪಡಿಸಲು ಹೈಕೋರ್ಟ್ ನಕಾರ

ಬೆಳ್ತಂಗಡಿ: ನ್ಯಾಯಾಲಯದ ನಿರ್ಬಂಧ ಇದ್ದರೂ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡಿದ ಆರೋಪದಲ್ಲಿ ಸೋಮನಾಥ್‌ ನಾಯಕ್‌ ಎಂಬುವರಿಗೆ ಬೆಳ್ತಂಗಡಿ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

 

ಬೆಳ್ತಂಗಡಿ ಪ್ರಧಾನ ಸಿವಿಲ್‌ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸುವಂತೆ ಕೋರಿ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಸೋಮನಾಥ ನಾಯಕ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್‌ ಇಂದಿರೇಶ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶಿಕ್ಷೆ ರದ್ದುಪಡಿಸಲು ನಿರಾಕರಿಸಿ ಆದೇಶಿಸಿತು.

ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಯಾವುದೇ ರೀತಿ ಮಾನಹಾನಿಕಾರಕ ಹೇಳಿಕೆ ನೀಡಬಾರದು, ಅಪಪ್ರಚಾರ ಮಾಡಬಾರದು ಎಂದು ಸಿವಿಲ್‌ ನ್ಯಾಯಾಲಯ ನಿರ್ಬಂಧಕಾಜ್ಞೆ ವಿಧಿಸಿದ್ದರೂ, ಅರ್ಜಿದಾರರು ಅದನ್ನು ಮೀರಿ ನಡೆದುಕೊಂಡಿರುವುದು ಸ್ಪಷ್ಟವಾಗಿದೆ. ಮೇಲಾಗಿ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳಲು ಅರ್ಜಿದಾರರು ವಿಫ‌ಲರಾಗಿದ್ದಾರೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂ ಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಮತ್ತು ಅಪಪ್ರಚಾರ ಮಾಡಿರುವುದು ಕ್ಷಮಾರ್ಹವಲ್ಲ. ಅಲ್ಲದೆ, ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸುವ ಯಾವುದೇ ಕಾರಣವೂ ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಬೆಳ್ತಂಗಡಿ ನ್ಯಾಯಾಲಯ ವಿಧಿಸಿದ ಶಿಕ್ಷೆ ರದ್ದುಪಡಿಸಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿತು.

ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ವರದಿ ಮಾಡದಂತೆ, ಅಪಪ್ರಚಾರ ಕೈಗೊಳ್ಳದಂತೆ 2013ರಲ್ಲಿ ಡಾ. ವೀರೇಂದ್ರ ಹೆಗ್ಗಡೆ ಬೆಳ್ತಂಗಡಿ ಸಿವಿಲ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಾನಹಾನಿ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಆದೇಶ ಉಲ್ಲಂ ಸಿ ನಾಯಕ್‌ ಅಪಪ್ರಚಾರ ಮಾಡಿದ್ದಕ್ಕೆ 4.50 ಲಕ್ಷ ರೂ. ದಂಡ ವಿಧಿಸಿತ್ತು. ದಂಡ ಪಾವತಿಸಲು ವಿಫ‌ಲವಾದಲ್ಲಿ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿತ್ತು.

ಈ ಆದೇಶ ಪ್ರಶ್ನಿಸಿ ಸೋಮನಾಥ ನಾಯಕ್‌ ಬೆಳ್ತಂಗಡಿ ಪ್ರಧಾನ ಸಿವಿಲ್‌ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಶಿಕ್ಷೆ ರದ್ದುಪಡಿಸಲು ನಿರಾಕರಿಸಿದ್ದರಿಂದ ಸೋಮನಾಥ ನಾಯಕ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ತಾವು ದುರುದ್ದೇಶದಿಂದ ಹೇಳಿಕೆಗಳನ್ನು ನೀಡಿರಲಿಲ್ಲ. ಸದುದ್ದೇಶದಿಂದಲೇ ಹೇಳಿಕೆ ನೀಡಿದ್ದಾಗಿ ಸಮರ್ಥಿಕೊಳ್ಳಲು ಪ್ರಯತ್ನಿಸಿದ್ದರು. ಈ ವಾದವನ್ನು ಅಲ್ಲಗಳೆದಿರುವ ಹೈಕೋರ್ಟ್‌ ಅರ್ಜಿ ವಜಾಗೊಳಿಸಿದೆ.

Leave A Reply

Your email address will not be published.