ಧಾರಾಕಾರ ಮಳೆ -ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ | ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ|
ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಅಸಾನಿ ಚಂಡಮಾರುತದ ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ನೈಋತ್ಯ ಮಾನ್ಸೂನ್ ಕಳೆದ ಸೋಮವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅಪ್ಪಳಿಸಿದ್ದು, ಹವಾಮಾನ ತಜ್ಞರ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ಬೇಗನೆ ಆಗಲಿದೆ.
ಹಾಗಾಗಿ, ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದ್ದು ರಾಜ್ಯ ಹವಾಮಾನ ಇಲಾಖೆ ಬುಧವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರೆಡ್ ಅಲರ್ಟ್ ಘೋಷಿಸಿದೆ.
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ. ಮುಖ್ಯವಾಗಿ ಕರಾವಳಿಯಲ್ಲಿ ಮಂಗಳವಾರ ಮತ್ತು ಬುಧವಾರ ನಿರಂತರ ಮಳೆಯಾಗಲಿದ್ದು, ಅದರಲ್ಲೂ ಬುಧವಾರ ಕರಾವಳಿಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿಯೂ ಐದು ದಿನ ಸಾಧಾರಣ ಮಳೆ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮೇ 17ರಿಂದ 20ವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೂರು ದಿನ ಭಾರೀ ಮಳೆ: ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳಭಾಗಗಳಲ್ಲಿ ಮುಂದಿನ 3 ದಿನಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ನಂತರ ಎರಡು ದಿನವೂ ಮಳೆಯಾಗಲಿದೆ. ಲಕ್ಷದ್ವೀಪದಲ್ಲಿ ಬುಧವಾರ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ