ಇನ್ನೂ ಎರಡು ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ | ಕರಾವಳಿ ಜಿಲ್ಲೆಗಳಲ್ಲಿ ಗುಡುಗು,ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!
ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆರಾಯನ ಆರ್ಭಟ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಬಯಲುಸೀಮೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಈಗಾಗಲೇ ಜೋರಾದ ಮಳೆ ಇದ್ದು, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಕರ್ನಾಟಕದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಕರಾವಳಿಯ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.