ಕೇಂದ್ರ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ !! | ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಿ ಮೋದಿ ಸೂಚನೆ
ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು ಪ್ರಧಾನಮಂತ್ರಿಗಳ ಕಾರ್ಯಾಲಯವು ಮಾಹಿತಿ ನೀಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಾರ್ಯಾಲಯವು ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಮೋದಿ ಸರ್ಕಾರ 10 ಲಕ್ಷ ಉದ್ಯೋಗಗಳನ್ನು ಒದಗಿಸಲಿದೆ ಎಂದು ತಿಳಿಸಿದೆ.
ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಏಪ್ರಿಲ್‍ನಲ್ಲಿ ಪ್ರಧಾನಿ ಮೋದಿ ಅವರು ಉನ್ನತ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಸೂಚಿಸಿದ್ದರು. ಇದರಿಂದಾಗಿ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಿದೆ.
ಫೆಬ್ರವರಿಯಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, 2020ರ ಮಾರ್ಚ್ 1ರವರೆಗೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 87 ಲಕ್ಷ ಹುದ್ದೆಗಳು ಖಾಲಿ ಇವೆ.