ಆಗಸ್ಟ್ ತಿಂಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ!!

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿ, ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ‘2020ರಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ. 61.80ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಫಲಿತಾಂಶದಲ್ಲಿ ಉತ್ತೀರ್ಣ ಪ್ರಮಾಣ 0.08ರಷ್ಟು ಏರಿಕೆಯಾಗಿದೆ’ ಎಂದು ಮಾಹಿತಿ ನೀಡಿದರು.

‘2020ರಲ್ಲಿ ನಗರ ಭಾಗದಲ್ಲಿನ ಕಾಲೇಜುಗಳ ಫಲಿತಾಂಶ ಉತ್ತಮವಾಗಿತ್ತು. ಈ ಬಾರಿ ಗ್ರಾಮಾಂತರ ಪ್ರದೇಶಗಳ ಕಾಲೇಜುಗಳ ಫಲಿತಾಂಶ ಉತ್ತಮವಾಗಿದೆ. ರಾಜ್ಯದ 56 ಕಾಲೇಜುಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ’ ಎಂದು ಸಚಿವರು ಮಾಹಿತಿ ನೀಡಿದರು.

‘ಹಿಂದಿನ ವರ್ಷಗಳಂತೆ ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿಯು ಉತ್ತೀರ್ಣ ಪ್ರಮಾಣ ಉತ್ತಮವಾಗಿದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಉಡುಪಿ ದ್ವಿತೀಯ ಸ್ಥಾನ ಹಾಗೂ ವಿಜಯಪುರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಉತ್ತೀರ್ಣ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳ ಫಲಿತಾಂಶ ಸುಧಾರಣೆ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಸಚಿವರು ಹೇಳಿದರು.

ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಯನ್ನು ಪಡೆಯಲು ಇಂದಿನಿಂದಲೇ ಅವಕಾಶ ಕಲ್ಪಿಸಲಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಫಲಿತಾಂಶಕ್ಕೆ ಕಾಯದೇ, ಪೂರಕ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸುವುದು ಉತ್ತಮ ಎಂದು ಸಚಿವರು ಸಲಹೆ ನೀಡಿದರು.

‘ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುತ್ತದೆ. ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯಲಿವೆ’ ಎಂದು ಸಚಿವರು ಮಾಹಿತಿ ನೀಡಿದರು.

ಅಲ್ಲದೆ, ‘ಫಲಿತಾಂಶದಲ್ಲಿ ಹಿನ್ನೆಡೆಯಾದವರು ನಿರಾಶರಾಗಬಾರದು. ಈ ಪರೀಕ್ಷೆಯೇ ಅಂತಿಮವಲ್ಲ. ಎಲ್ಲವನ್ನು ಧೈರ್ಯವಾಗಿ ಎದುರಿಸುವ ಮಾನಸಿಕತೆಯನ್ನು ಹೊಂದಬೇಕು. ಪರೀಕ್ಷೆ ಹಾಗೂ ಫಲಿತಾಂಶ ನಮ್ಮ ಶೈಕ್ಷಣಿಕ ಜೀವನದ ಒಂದು ಭಾಗವಷ್ಟೇ. ಪೂರಕ ಪರೀಕ್ಷೆ ಬರೆಯುವ ಮೂಲಕ ಯಶಸ್ಸು ಸಾಧಿಸಿ ಶೈಕ್ಷಣಿಕ ಜೀವನ ಮುಂದುವರೆಸಬೇಕು’ ಎಂದು ಸಚಿವರು ಕಿವಿ ಮಾತು ಹೇಳಿದರು.

Leave A Reply