ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ!! | 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಎಲ್ಲಿ ಓಡುವಿರಿ ನಿಲ್ಲಿ ಮೋಡಗಳೆ ನಾಲ್ಕು ಹನಿಯ ಚೆಲ್ಲಿ ಎಂಬ ರೈತನ ಮೊರೆ ಆಗಸವನ್ನು ತಲುಪಿದಂತೆ ಕಾಣುತ್ತಿದೆ. ರಾಜ್ಯದಲ್ಲಿ ಈ ಬಾರಿಯ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಮಳೆಯಾಗುವ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ.
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.