ಭಾರೀ ಮಳೆ, ಕೊಡಗು, ಚಿಕ್ಕಮಗಳೂರು, ಉತ್ತರಕನ್ನಡ ಶಾಲಾ ಕಾಲೇಜುಗಳಿಗೆ ನಾಳೆ ( ಜು.6) ರಂದು ರಜೆ !
ಕರಾವಾಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ( ಜು.5) ದ.ಕ.ದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಷ್ಟು ಮಾತ್ರವಲ್ಲದೇ, ಎರಡು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.
ಇತ್ತ ಕಡೆ ಕಾಫಿ ನಾಡು ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಕಾವೇರಿ, ಲಕ್ಷ್ಮಣ ತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಜುಲೈ 6 ( ನಾಳೆ) ಬುಧವಾರ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
4ದಿನ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಚಿಕ್ಕಮಗಳೂರು ತಾಲೂಕಿನ ಶಾಲೆಗಳಿಗೆ (ಅಂಬಳೆ, ಲಕ್ಯಾ ಹೋಬಳಿ ಹೊರತು ಪಡಿಸಿ) ಜು.6ರಿಂದ 9ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕಡೂರು, ತರೀಕೆರೆ, ಅಜ್ಜಂಪುರ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆಯಾಗಿಲ್ಲ.
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.6ರಂದು (ಬುಧವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿರುತ್ತಾರೆ.