ದ.ಕ. : ಇಂದು ( ಜುಲೈ 5) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
ದ.ಕ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸತತ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ನಿನ್ನೆ ಬೆಳ್ತಂಗಡಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ದಕ್ಷಿಣ ಕನ್ನಡ ಮಾತ್ರವಲ್ಲದೇ ಹೆಬ್ರಿ ತಾಲೂಕಿನಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜು. 5ರಂದು ಹೆಬ್ರಿ ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿಯವರು ರಜೆ ಘೋಷಿಸಿದ್ದಾರೆ.
ಈಗ ಬಂದ ಮಾಹಿತಿಯ ಪ್ರಕಾರ ಇಂದು ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ಕೊಟ್ಟಿದ್ದು, ಸುಮಾರು 200 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಜಿಲ್ಲೆಯಾದ್ಯಂತ ಸೋಮವಾರ ಸಂಜೆಯಿಂದಲೇ ವರುಣನ ಅಬ್ಬರ ಇಡೀ ರಾತ್ರಿ ಭಾರಿ ಮಳೆ ಸುರಿದಿದೆ. ಸೋಮವಾರ ಹೆಬ್ರಿ ತಾಲೂಕಿಗಷ್ಟೇ ರಜೆ ಘೋಷಿಸಿದ್ದು, ಮಳೆಯ ತೀವ್ರತೆ ಗಮನಿಸಿದ ಡಿಸಿ ಮಂಗಳವಾರ ಬೆಳಗ್ಗೆಯೇ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಭಾರೀ ಮಳೆ ಸುರಿಯುತ್ತಿದ್ದು, ಜನರು ಮನೆಯಿಂದ ಹೊರ ಬರೋಕೆ ಕಷ್ಟಪಡುವಂತಾಗಿದೆ. ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಕೂಡ ಪರದಾಡುತ್ತಿದ್ದು, ಜನರು ರಸ್ತೆಯಲ್ಲಿ ಓಡಾಡೋಕೆ ಕಷ್ಟಪಡುತ್ತಿದ್ದಾರೆ. ಈ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಳಸ ಮತ್ತು ಮೂಡಿಗೆರೆ ತಾಲೂಕಿನ ಶಾಲೆಗಳಿಗೆ 2 ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.