ಕರಾವಳಿಗೆ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಯಲ್ಲೋ – ಆರೆಂಜ್ ಅಲರ್ಟ್ ಘೋಷಣೆ ಡೀಟೇಲ್ಸ್ !
ಬೆಂಗಳೂರು: ಈಗಾಗಲೇ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶದ ಗ್ರಾಮಗಳು ಜಲಾವೃತಗೊಂಡು ರಸ್ತೆ ಸಂಪರ್ಕವೇ ಕಡಿತವಾಗಿದೆ. ಈ ನಡುವೆ ಮತ್ತೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ರಾಜ್ಯ ಹವಾಮಾನ ಇಲಾಖೆಯು ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯಾಧ್ಯಂತ ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಪರಿಣಾಮ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಆರೆಂಜ್ ಅಲರ್ಟ್ ನೀಡಿದೆ.
ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಇನ್ನೂ ಐದು ದಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಸಂಜೆಯ ವೇಳೆಗೆ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದೆ.