2022-23ನೇ ಸಾಲಿನ ಸ್ನಾತಕ, ಸ್ನಾತಕೋತ್ತರ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ
2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ, ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ.
ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸುಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ.
ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಕೋವಿಡ್-19 ರೋಗದ ಹಿನ್ನಲೆಯಲ್ಲಿ ಲಾಕ್ ಡೌನ್ ಆದ ಕಾರಣ, ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಹಿತದೃಷ್ಠಿಯನ್ನು ಮಗಂಡು 2020-21 ಮತ್ತು 2021-22ನೇ ಸಾಲಿಗೆ ಸ್ನಾತಕ, ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿಯನ್ನು ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ, ತಾಂತ್ರಿಕ ಶಿಕ್ಷಣ ಕಾಲೇಜುಗಳಲ್ಲಿ ಜಾರಿಗೊಳಿಸಿ ಆದೇಶಿಸಲಾಗಿತ್ತು. ಈ ವೇಳಾಪಟ್ಟಿಯನ್ನು ಅನುಷ್ಠಾನಗೊಳಿಸಲು ಸೂಕ್ತ ಆದೇಶ ಹೊರಡಿಸಲು ಕೋರಿರುತ್ತಾರೆ.
ಈ ಎಲ್ಲಾ ಹಿನ್ನಲೆಯಲ್ಲಿ 2022-23ನೇ ಸಾಲಿನ ಸ್ನಾತಕ, ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ, ಅನುದಾನ, ಅನುದಾನ ರಹಿತ ಕಾಲೇಜುಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಈ ಕೆಳಕಂಡಂತೆ ಒಂದೇ ಶೈಕ್ಷಣಿಕ ವೇಳಾಪಟ್ಟಿಯನ್ನು ಜಾರಿಗೊಳಿಸಲು ಆದೇಶಿಸಿದ್ದಾರೆ.