ಡಿನೋಟಿಫಿಕೇಶನ್ ಪ್ರಕರಣ : ಬಿಎಸ್ ವೈಗೆ ಸುಪ್ರೀಂ ನಿಂದ ಬಿಗ್ ರಿಲೀಫ್ ನ್ಯೂಸ್
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ತಮ್ಮ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ಚುನಾವಣಾ ಕ್ಷೇತ್ರಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಬಿ. ಎಸ್. ವೈ ಗೆ ಸುಪ್ರೀಂಕೋರ್ಟ್ ದೊಡ್ಡ ರಿಲೀಫ್ ಸುದ್ದಿಯನ್ನೇ ನೀಡಿದೆ.
ಹೌದು. ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ಯಡಿಯೂರಪ್ಪರಿಗೆ ದೊಡ್ಡ ನಿರಾಳತೆ ಸಿಕ್ಕಿದೆ. ಸರಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಇದೀಗ ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿನ ಕ್ರಿಮಿನಲ್ ವಿಚಾರಣೆಗೆ ತಡೆ ನೀಡುವಂತೆ ಅವರು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ಬೆಂಗಳೂರಿನ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಪ್ರದೇಶಗಳಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಭೂಮಿ ಮಂಜೂರು ಮಾಡಲು ಅಕ್ರಮವಾಗಿ ಡಿನೋಟಿಫೈ ಮಾಡಿದ್ದರು ಎಂದು ಮಾಜಿ ಹಿರಿಯ ಬಿಜೆಪಿ ನಾಯಕರಾಗಿರುವ ಬಿಎಸ್ವೈ ವಿರುದ್ಧ ವಾಸುದೇವ ರೆಡ್ಡಿ ಎಂಬುವವರು ಖಾಸಗಿ ದೂರು ದಾಖಲಿಸಿದ ಬಳಿಕ 2013ರಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು.
2006-07ರ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಬಳಿಕ ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ರದ್ದುಗೊಳಿಸಬೇಕು ಎಂಬ ಯಡಿಯೂರಪ್ಪ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್ 2020ರಲ್ಲಿ ನಿರಾಕರಿಸಿತ್ತು.
ಹೀಗಾಗಿ, 2020ರ ಡಿಸೆಂಬರ್ 22ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಯಡಿಯೂರಪ್ಪ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇಂದು ಅವರ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್ ತನಿಖೆ: ತಡೆ ನೀಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ತಮ್ಮ ಬದಲಾಗಿ ತಮ್ಮ ಮಗ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಘೋಷಣೆ ಮಾಡಿದ ಸಂದರ್ಭದಲ್ಲಿಯೇ ಸುಪ್ರೀಂಕೋರ್ಟ್ನ ಈ ನಿರ್ಧಾರ ಹೊರಬಿದ್ದಿದೆ.