ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ.,ಬಿಜೆಪಿ ಕಡೆಯಿಂದ 25 ಲಕ್ಷ ರೂ ಚೆಕ್ ಹಸ್ತಾಂತರ !!! ಅಗತ್ಯ ಬಿದ್ದರೆ ಪ್ರವೀಣ್ ಕೊಲೆ ಪ್ರಕರಣ NIA ಗೆ ವಹಿಸುವಿಕೆ – ಸಿಎಂ
ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಬಳಿಕ ಮಾಧ್ಯಮದ ಜತೆ ಮಾತಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಹತ್ಯೆ ಅತ್ಯಂತ ಖಂಡನೀಯ. ಇದು ಕೊಲೆ ಮಾತ್ರ ಅಲ್ಲ, ಇದೊಂದು ದೇಶದ್ರೋಹದ ಕೆಲಸವಾಗಿದೆ. ಪೂರ್ವ ನಿಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಕೇರಳದ ಗಡಿಯಲ್ಲೇ ಹತ್ಯೆ ನಡೆದಿರೋ ಕಾರಣ ಇದು ವ್ಯವಸ್ಥಿತ ಕೊಲೆ ಎನ್ನಬಹುದು. ಹಲವಾರು ವರ್ಷಗಳಿಂದ ಹೀಗೆ ಕರಾವಳಿ ಪ್ರದೇಶದಲ್ಲಿ ಕೊಲೆಗಳು ನಡೆಯುತ್ತಿರೋ ಪರಿಣಾಮ ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ರಾಜ್ಯ ಸರ್ಕಾರದಿಂದ 25 ಲಕ್ಷ, ಬಿಜೆಪಿಯಿಂದ 25 ಲಕ್ಷ ಚೆಕ್ ನೀಡಿದ್ದೇವೆ. ನಮ್ಮ ಸರ್ಕಾರ ಮತ್ತು ಪಕ್ಷದಿಂದ ಪ್ರವೀಣ್ ಮನೆಯವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನಾವು ಪ್ರವೀಣ್ ಹತ್ಯೆ ಕೇಸನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸೋಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಹತ್ಯೆ ಹಿಂದೆ ಯಾವುದೇ ಸಂಘಟನೆ ಇದ್ದರೂ ಬಂಧಿಸುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಗೃಹ ಸಚಿವ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್,ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ,ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಂಸದ ನಳೀನ್ ಕುಮಾರ್ ಕಟೀಲ್, ನಾಯಕರಾದ
ಸಿ.ಟಿ ರವಿ, ಶಾಸಕರಾದ ಸಂಜೀವ್ ಮಠಂದೂರು, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕಕ್ಕೆ ಎನ್ ಐ ಎ ಅಗತ್ಯವಿದೆ : ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ , ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇಧಿಸಲಾಗುವುದು. ಪಿಎಫ್‍ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಮಸೂದ್ ಹತ್ಯೆಗೂ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಎಂಬ ಬಗ್ಗೆ ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.