ಮುಂದುವರಿದ ವರುಣನಾರ್ಭಟ | ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ನಿನ್ನೆಯಿಂದ ನಗರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಸಾರಲಾಗಿದೆ. ಬೆಂಗಳೂರು ಡಿಸಿ ಕೆ.ಶ್ರೀನಿವಾಸ್ ಅವರು ಇಂದು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ. ಮಳೆಯಿಂದ ರಜೆ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದೂ ಕೂಡಾ ಮಳೆರಾಯನ ಆರ್ಭಟ ಕಮ್ಮಿ ಆಗುವ ಲಕ್ಷಣ ಕಾಣಿಸುತ್ತಿಲ್ಲ. ಹಾಗಾಗಿ ನಗರದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಮೂರು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

Leave A Reply

Your email address will not be published.