ವಿಟ್ಲ : ಕಾಲೇಜು ವಿದ್ಯಾರ್ಥಿನಿಯ ಪ್ರಾಣ ಕಸಿದ ಜ್ವರ | ತೀವ್ರ ಜ್ವರ ಚಿಕಿತ್ಸೆ ಫಲಿಸದೆ ಸಾವು
ವಿಟ್ಲ : ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ 20 ವರ್ಷದ ಕವಿತಾ ಜ್ವರದಿಂದ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಳು.
ಮಂಗಳವಾರ ಜ್ವರ ಮತ್ತೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋದ ವೇಳೆ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು .
ಅಲ್ಲಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.