ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ | ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿನ್ನೆ ರಾತ್ರಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆ.
ಆದರೆ, ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಎನ್‌ಐಎ ( NIA) ಅಧಿಕಾರಿಗಳು ತಮಿಳುನಾಡಿನ ( Tamilnadu) ವಿವಿಧ ಕಡೆಗಳಲ್ಲಿ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಹಾಗೂ ಅನೇಕ ಕಾರ್ಯಕರ್ತರ ಬಂಧನ ಮಾಡಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ.
ದಾಳಿ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಜೆಪಿ ಕಚೇರಿ ದಾಳಿ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಇದರ ಜೊತೆಗೆ ಹಿಂದೂ ಸಂಘಟನೆಯ ಪದಾಧಿಕಾರಿಯೊಬ್ಬರ ಒಡೆತನದ ಮತ್ತೊಂದು ವಾಣಿಜ್ಯ ಸಂಸ್ಥೆ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಉನ್ನತಾಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ. ಹಾಗೂ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ನಿನ್ನೆ ತಡರಾತ್ರಿ ಪ್ರತಿಭಟನೆ ನಡೆಸಿದರು. ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಬಿಜೆಪಿ ಕಾರ್ಯಕರ್ತ ನಂದಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ನಮ್ಮ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವುದು ಭಯೋತ್ಪಾದಕ ಮನಸ್ಸಿರುವ ವ್ಯಕ್ತಿಗಳ ಕೃತ್ಯ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.