ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ದಸರಾ ಹಬ್ಬದ ಸಂಭ್ರಮದಲ್ಲಿ ಇದ್ದ ಜನತೆಗೆ ವರುಣ ಕೃಪೆ ತೋರಿಸಲು ರೆಡಿಯಾಗಿದ್ದಾನೆ. ಹೌದು, ಮಳೆ ಮತ್ತೆ ಕೆಲವೆಡೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಕಾರಣ, ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದಾಗಿ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕದ ಪೂರ್ವ ಭಾಗಕ್ಕೆ, ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ಮುಂದಿನ 5 ದಿನ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 13.5 ಮಿಮೀ ಮಳೆಯಾಗಿದೆ. ಇಂದು ಮತ್ತು ನಾಳೆಯೂ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗಲಿದೆ ಎಂಬ ವರದಿಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಸಂಭವ ಹೆಚ್ಚಿದೆ. ಮುಂದಿ‌ನ ಎರಡು ದಿನ ಕೆಲವೆಡೆ ಮಳೆಯಾಗುವ ಸಂಭವವಿದೆ.

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಒಂದೆರಡು ಬಾರಿ ಹಗುರದಿಂದ ಸಾದಾರಣ ಮಳೆ, ಅಥವಾ ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕೂಡ, ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಘಂಟೆಗಳಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ, ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಮುಂದಿನ 48 ಘಂಟೆಗಳಲ್ಲಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೋಲಾರ, ತುಮಕೂರಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

Leave A Reply

Your email address will not be published.