ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ವಿಚಾರ : ಇಂದು ಸುಪ್ರಿಂ ಕೋರ್ಟ್ ತೀರ್ಪು

ಕರ್ನಾಟಕದ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಬಗ್ಗೆ ಸುಪ್ರೀಂ ಕೋರ್ಟ್‌ ಗುರುವಾರ ತೀರ್ಪು ಪ್ರಕಟಿಸಲಿದೆ.

10 ದಿನಗಳ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ಸೆಪ್ಟೆಂಬರ್‌ 22ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಈ ಪ್ರಕರಣದ ತೀರ್ಪನ್ನು ಗುರುವಾರ ಪ್ರಕಟಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ.

‘ಸರ್ಕಾರಿ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು’ ಎಂದು ಕೋರಲಾಗಿದ್ದ ಎಲ್ಲಾ ವೈಯಕ್ತಿಕ ಹಾಗೂ ಪಿಐಎಲ್‌ಗಳನ್ನು ಮಾರ್ಚ್‌ 15ರಂದು ತಿರಸ್ಕರಿಸಿದ್ದ ಹೈಕೋರ್ಟ್‌ನ ತ್ರಿಸದಸ್ಯ ಪೀಠ, ‘ಈ ವಿಷಯವನ್ನು ದೇಶದಾದ್ಯಂತ ವಿವಾದವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಸಂಶಯ ವ್ಯಕ್ತಪಡಿಸಿತ್ತು.

‘ಹಿಜಾಬ್ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ಅಂತೆಯೇ ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬುದಕ್ಕೆ ಕುರಾನಿನಲ್ಲಿ ಯಾವುದೇ ಅಧಿಕೃತ ಆಧಾರವಿಲ್ಲ’ ಎಂದು ಅಭಿಪ್ರಾಯಪಟ್ಟಿತ್ತು.

ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ 22 ಅರ್ಜಿದಾರರು, ‘ವಿದ್ಯಾರ್ಥಿಗಳಿಗೆ ಕಡ್ಡಾಯವಾದ ಸಮವಸ್ತ್ರ ರೂಪಿಸಿ ಕರ್ನಾಟಕ ಸರ್ಕಾರ ಕಾಯ್ದೆ ಅಥವಾ ನಿಯಮ ಜಾರಿಗೊಳಿಸಿಲ್ಲ. ಹಾಗಾಗಿ, ಹಿಜಾಬ್‌ ಧಾರಣೆ ನಿಷೇಧ ಸರಿಯಲ್ಲ. ಹಿಜಾಬ್‌ ಧರಿಸುವುದನ್ನು ಸಂವಿಧಾನದ ಅಡಿ ಖಾತರಿಪಡಿಸಲಾದ ಗೋಪ್ಯತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಮೂಲಭೂತ ಹಕ್ಕುಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಆದರೆ, ಅದನ್ನು ಅರಿಯದೇ ಹೈಕೋರ್ಟ್‌ ಪ್ರಮಾದವೆಸಗಿದೆ’ ಎಂದು ದೂರಿದ್ದರು.

Leave A Reply