PFI ನಿಂದ ದೇಶದಲ್ಲಿ ಶಾಂತಿ ಕದಡಲು ಯತ್ನ: ಹಲವೆಡೆ ಎನ್‌ಐಎ ದಾಳಿ
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಕಾರ್ಯಕರ್ತರಿಂದ ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದ ಹಿನ್ನಲೆಯಲ್ಲಿ ರಾಷ್ಟ್ರೀಯ ತನಿಖೆ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಕೇರಳ ಹಾಗೂ ಕರ್ನಾಟಕದ ಕಲಬುರಗಿ ಹಲವೆಡೆ ಶೋಧ ಕಾರ್ಯ ನಡೆಸಿದ್ದಾರೆ.
ಕೇರಳದ ಕೋಝಿಕ್ಕೋಡ್ ಜಿಲ್ಲೆ ಮತ್ತು ಕರ್ನಾಟಕದ ಕಲಬುರಗಿ ಜಿಲ್ಲೆಯ ಮೂರು ಪ್ರದೇಶಗಳಲ್ಲಿ ಅಧಿಕಾರಿಗಳು ಭೇಟಿ ನೀಡಿದ್ದು, ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ ಮತ್ತು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೇರಿದಂತೆ ದೇಶದ ಹಲವೆಡೆ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ.
ಶಾಂತಿ ಕದಡುವ ನಿಟ್ಟಿನಲ್ಲಿ ನಿಷೇಧ ಸಂಘಟನೆಯೊಂದು ಕಾರ್ಯಕರ್ತರಿಗೆ ತರಬೇತಿ ನೀಡಲು ಶಿಬಿರಗಳನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೂಕ್ತ ಮಾಹಿತಿ ಮೇರೆಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ಒಂದಷ್ಟು ಡಿಜಿಟಲ್ ಸಾಕ್ಷ್ಯ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಗೊಳಿಸಲಾಗಿದ್ದರು ಕೂಡ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಮುಂದಾಗಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಹಣ ಸಂಗ್ರಹಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ನಿಷೇಧದ ಬಳಿಕ ಸಂಘಟನೆಗಳ ಕಾರ್ಯಕರ್ತರು ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ ಸೇರಿ ಇತರೆ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದು, ಅಲ್ಲಿಂದಲೇ ಶಾಂತಿ ಕಲಕುವ ನಿಟ್ಟಿನಲ್ಲಿ ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು, ತಮ್ಮ ಕಾರ್ಯಕರ್ತರಿಗೆ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. ಈ ದಾಳಿಯ ವೇಳೆ ಡಿಜಿಟಲ್ ಸಾಧನಗಳು ಮತ್ತು ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಈ ಸಂಬಂಧ ದೆಹಲಿಯ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿದೆ ಎನ್‌ಐಎ ತಿಳಿಸಿದೆ.