ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಹಿ ಸುದ್ದಿಯೊಂದನ್ನು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಸರಕಾರ ಮಾಸಿಕ ಭೋಜನ ವೆಚ್ಚವನ್ನು ಏರಿಕೆ ಮಾಡಿ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಹೌದು, ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡಲು ಸರ್ಕಾರ ಮಾಸಿಕ ಭೋಜನ ವೆಚ್ಚವನ್ನು ಏರಿಕೆ ಮಾಡಿದೆ.

“ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಾಸಿಕ ಭೋಜನ ವೆಚ್ಚವನ್ನು ರೂ. 1,600 ರಿಂದ 1,750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರೂ. 1,500 ರಿಂದ 1,650 ರೂಪಾಯಿಗೆ ಹೆಚ್ಚಿಸಲಾಗಿದೆ” ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದರು. ಮೆಟ್ರಿಕ್ ಪೂರ್ವ (9 ಮತ್ತು10ನೇ ತರಗತಿ) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಶೇ. 60 ರಷ್ಟು ಕೇಂದ್ರ ಸರ್ಕಾರದಿಂದ ಶೇ. 40 ರಷ್ಟು ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿವೇತನವನ್ನು ಡಿಬಿಡಿ ಮೂಲಕ ಪಾವತಿಸಲಾಗುತ್ತದೆ ಎಂದು ತಿಳಿಸಿದರು.

ಇನ್ನೂ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿಯ 70 ಹಾಗೂ ಪರಿಶಿಷ್ಟ ಪಂಗಡದ 23 ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಪರಿಶಿಷ್ಟ ಜಾತಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಅತೀ ಸೂಕ್ಷ್ಮ ಸಮುದಾಯದ ಜನರು ಅಭಿವೃದ್ಧಿಗಾಗಿ ರೂ. 50 ಕೋಟಿ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Leave A Reply

Your email address will not be published.