ನಾಸಲ್ ವ್ಯಾಕ್ಸಿನ್ ಗೆ ಕೇಂದ್ರ ಅಸ್ತು | ಹೆಚ್ಚಿನ ಮಾಹಿತಿ ಇಲ್ಲಿದೆ
ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಮತ್ತೊಮ್ಮೆ ಕೋರೋನಾ ತಾಂಡವ ವಾಡುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನೆಲೆ ಸರ್ಕಾರ ಮುಂಜಾಗ್ರತ ಕ್ರಮ ಕೈಗೊಳ್ಳಲು ಮುಂದಾಗಿದೆ.
ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಅಣಿಯಾಗಿದೆ. ವಿಶ್ವದ ವಿವಿಧ ದೇಶಗಳಲ್ಲಿ ಕೋರೋನಾ ಪ್ರಕರಣಗಳು ವೇಗವಾಗಿ ಹರಡಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.
ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ನಡುವೆ ಮೂಗಿನ ಮೂಲಕ ನೀಡಲಾಗುವ ನಾಸಲ್ ವ್ಯಾಕ್ಸಿನ್ ಗೆ ಕೇಂದ್ರ ಸರ್ಕಾರ ಇಂದು ಅನುಮತಿ ಸೂಚಿಸಿದೆ. ನಾಸಲ್ ಲಸಿಕೆಗೆ ಭಾರತ ಸರ್ಕಾರ ಅನುಮೋದನೆ ನೀಡಿದ್ದು, ಇದನ್ನು ಹೆಟೆರೊಲಾಜಸ್ ಬೂಸ್ಟರ್ ಆಗಿ ಬಳಸಲಾಗುತ್ತದೆ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ಲಭ್ಯವಿರುತ್ತದೆ. ಇದನ್ನು ಇಂದಿನಿಂದ COVID-19 ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹೀಗಾಗಿ, ಇದು ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದ್ದು, ಆ ಬಳಿಕ ಸರ್ಕಾರಿ ಆಸ್ಪತ್ರೆ ಗಳಲ್ಲಿ ಕೂಡ ಲಭ್ಯವಾಗಲಿದೆ. ಚುಚ್ಚುಮದ್ದಿಗೆ ಹೆದರುವ ಮಂದಿಗೆ ಈ ನಾಸಲ್ ವ್ಯಾಕ್ಸಿನ್ ವರದಾನವಾಗಿ ಪರಿಣಮಿಸಲಿದೆ. ಇದರ ಜೊತೆಗೆ ಉಳಿದ ಲಸಿಕೆಗಳಷ್ಟೇ ಇದು ಪರಿಣಾಮಕಾರಿ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.
18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಗೆ ಈ ವರ್ಷದ ಸೆಪ್ಟೆಂಬರ್ 5 ರಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ಅನುಮೋದನೆ ನೀಡಿದೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಸಂಸದರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಸಚಿವೆ ಪವಾರ್, ಲಸಿಕೆಯನ್ನು 28 ದಿನಗಳ ಅಂತರದಲ್ಲಿ ತಲಾ 0.5 ಮಿಲಿ ಎರಡು ಡೋಸ್‌ಗಳಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ. ವಿದೇಶಗಳೊಂದಿಗೆ ಮಾಡಿಕೊಂಡಿರುವ ಪರಸ್ಪರ ವಿನಿಮಿಯ ನೀತಿ ಅನುಸಾರ ಭಾರತ 90 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್-19 ಲಸಿಕೆಯನ್ನು ರಫ್ತು ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್ ಮಾಹಿತಿ ನೀಡಿದ್ದಾರೆ.
ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ ಕೋವಿಡ್ ಲಸಿಕೆಯನ್ನು ಕೇಂದ್ರ ಆರೋಗ್ಯ ಸಚಿವಾಲಯವು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲು ಅನುಮೋದಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.