BIGG NEWS : ಜನತೆಗೆ ಗುಡ್ ನ್ಯೂಸ್ | ಮಹಿಳೆಯರಿಗೆ ಬಡ್ಡಿರಹಿತ ಸಾಲದ ಜೊತೆಗೆ ರೈತರಿಗೆ ಭರ್ಜರಿ ಕೊಡುಗೆ ಘೋಷಿಸಿದ ಸಿದ್ದರಾಮಯ್ಯ!!
ಮುಂದಿನ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ಸಿದ್ದತೆ ನಡೆಸುತ್ತಿದೆ. ಪಕ್ಷದ ನಾಯಕರು ಹಲವೆಡೆ ಭೇಟಿ ನೀಡಿ ವಿವಿಧ ಘೋಷಣೆಗಳನ್ನು ಮಾಡುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆ ನೀಡಲಿದ್ದಾರೆ ಸಿದ್ದರಾಮಯ್ಯ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ವೇಮಗಲ್ ನಲ್ಲಿ ಮಹಿಳಾ ಸಮಾವೇಶ ನಡೆದಿದೆ. ಈ ವೇಳೆ ಬಡ್ಡಿರಹಿತ ಸಾಲದ ಜೊತೆಗೆ ಮಹಿಳೆಯರು ಹಾಗೂ ರೈತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ ಹಾಗೂ ರೈತರಿಗೆ 5 ಲಕ್ಷ ರೂ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವೇಮಗಲ್ ನಲ್ಲಿ ನಡೆದ ಸಮಾವೇಶದಲ್ಲಿ ಘೋಷಣೆ ಮಾಡಿದ್ದಾರೆ.
ಇದೀಗ ಮಹಿಳೆಯರಿಗೆ ನೀಡಲಾಗುತ್ತಿರುವ 50 ಸಾವಿರ ರೂ ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗುವುದು. ಹಾಗೆಯೇ ರೈತರಿಗೆ ಬಡ್ಡಿರಹಿತ ಸಾಲವನ್ನು 5 ಲಕ್ಷಕ್ಕೆ ಏರಿಕೆ ಮಾಡುತ್ತೇವೆ. ಶೇ. 3ರ ಬಡ್ಡಿಯಲ್ಲಿ ರೈತರಿಗೆ ನೀಡುವ ಸಾಲವನ್ನು 10 ಲಕ್ಷದಿಂದ 20 ಲಕ್ಷ ರೂಪಾಯಿಗೆ ಏರಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಅಲ್ಲದೆ, ಸರಿಯಾಗಿ ಸಾಲದ ಕಂತು ಕಟ್ಟುತ್ತಿರುವವರ ಸಾಲವನ್ನು ಮನ್ನಾ ಮಾಡುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಸಾಲದ ಕಂತು ಕಟ್ಟಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆ ನಂತರ ಸಾಲ ಮನ್ನಾ ಮಾಡುವ, ಈ ಬಗ್ಗೆ ಪಕ್ಷದ ಪ್ರಣಾಳಿಕೆ ಕಮಿಟಿ ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೋಲಾರದಲ್ಲಿ ಎಪಿಎಂಸಿ ಮಾರುಕಟ್ಟೆಗೆ 100 ಎಕರೆ ಜಮೀನು ಮಂಜೂರು ಮಾಡುತ್ತೇವೆ. ಟೊಮ್ಯಾಟೊ ಮತ್ತು ಮಾವು ಸಂಸ್ಕರಣಾ ಘಟಕ ಮಾಡಿಕೊಡುತ್ತೇವೆ. ಜೊತೆಗೆ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುತ್ತೇವೆ. ಜನಸಾಮಾನ್ಯರಿಗೆ ಅನುಕೂಲವಾಗಲು ಹಾಲಿಗೆ ಪ್ರೋತ್ಸಾಹ ಧನವನ್ನು 6 ರೂಪಾಯಿಗೆ ಹೆಚ್ಚಿಸುತ್ತೇವೆ ಎಂದು ಭರವಸೆ ನೀಡಿದರು.
ಹಾಗೇ ಈ ಸಂದರ್ಭದಲ್ಲಿ ಸಿದ್ಧರಾಮಯ್ಯ ಮೋದಿ ಸರ್ಕಾರದ ಮೇಲೆ ಕಿಡಿಕಾರಿದ್ದು, ಬಿಜೆಪಿ ಸರ್ಕಾರ ಬಂದ ಮೇಲೆ ಉದ್ಯಮಿಗಳ 14 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ಸರ್ಕಾರ ಹಾಲು, ಮೊಸರು, ಅಕ್ಕಿ ಇವಿಷ್ಟೇ ಅಲ್ಲದೆ, ಮಕ್ಕಳ ಪೆನ್ನು ಪುಸ್ತಕಗಳ ಮೇಲೂ ತೆರಿಗೆ ವಿಧಿಸಿದೆ ಎಂದು ಹೇಳಿದರು.