DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳ, ಕಡತ ಸಲ್ಲಿಕೆಯ 24 ಗಂಟೆಯೊಳಗೆ ಸಹಿ ಮಾಡಿದ ಸಿದ್ದರಾಮಯ್ಯ: ಸರ್ಕಾರಿ ನೌಕರರ ಸಂಘ ಅಭಿನಂದನೆ!!
CM Siddaramaiah Approval for government employees DA Hike
DA Hike: ಸರ್ಕಾರಿ ನೌಕರರು ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರದ ನೂತನ ಸಿಎಂ ಸಿದ್ದರಾಮಯ್ಯ ಅವರು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯ ಅವರು ಶೇ.4 ತುಟ್ಟಿಭತ್ಯೆ (DA Hike) ಹೆಚ್ಚಳ ಮಾಡಲು ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದನೆ ನೀಡಿ ಆರ್ಥಿಕ ಇಲಾಖೆಗೆ ರವಾನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿಯಾದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಸಿಎಂ ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜೊತೆಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ ಮಾಡಲು ಆರ್ಥಿಕ ಇಲಾಖೆಯಿಂದ ಸೋಮವಾರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ವರ್ಗಾವಣೆ ಸೇರಿದಂತೆ ರಾಜ್ಯದ ಶಿಕ್ಷಕರ ಇನ್ನಿತರ ಸಮಸ್ಯೆಗಳ ಬಗ್ಗೆ ಕೂಡ ಪದಾಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದಾರೆ. ಈ ಎಲ್ಲಾ ಮನವಿಗೆ ಸಿಎಂ ಉತ್ತಮ ರೀತಿಯಲ್ಲಿ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ.
ಇನ್ನು ರಾಜ್ಯ ಸರ್ಕಾರವು 7ನೇ ವೇತನ ಆಯೋಗದ (7th Pay Commission) ಅವಧಿಯನ್ನು ಆರು ತಿಂಗಳು ವಿಸ್ತರಿಸಿದ್ದು, ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಬೇಡಿಕೆ ಮಂಡಿಸಿರುವ ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳಿಗೆ, ನೌಕರರಿಗೆ, ಸಾರ್ವಜನಿಕರಿಗೆ ಮತ್ತೊಮ್ಮೆ ತಮ್ಮ ಬೇಡಿಕೆಗಳನ್ನು ಸ್ಪಷ್ಟಪಡಿಸಲು ಅವಕಾಶ ನೀಡಿದೆ.
ಈಗಾಗಲೇ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರವಾಗಿ ಶೇ.17 ರಷ್ಟು ವೇತನ ಹೆಚ್ಚಳವನ್ನು ಕಳೆದ ಏಪ್ರಿಲ್ 1 ರಿಂದಲೇ ಜಾರಿಗೆ ತಂದಿದೆ. ಸದ್ಯ ಏಳನೇ ವೇತನ ಆಯೋಗ ರಚನೆಯಿಂದ 5.40 ಲಕ್ಷ ಸರ್ಕಾರಿ ನೌಕರರು, 3ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ 4 ಲಕ್ಷ ನಿವೃತ್ತ ನೌಕರರು ಲಾಭ ಪಡೆಯಲಿದ್ದಾರೆ.