ಭಾರೀ ಮಳೆ: ಜು.26ರಂದೂ ದ.ಕ.ದ ಶಾಲೆ, ಪ.ಪೂ.ಕಾಲೇಜುಗಳಿಗೆ ರಜೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು. 26ರ ಬುಧವಾರ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.