ದ.ಕ: ಮುಂದುವರಿದ ಮಳೆಯ ಕಾರಣ ನಾಳೆ (ಜು.27) ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ!
ಕರಾವಳಿಯಾದ್ಯಂತ ಮಳೆ ಬಿರುಸುಗೊಂಡಿದ್ದು, ಅಲ್ಲಲ್ಲಿ ನೀರಿನ ರಭಸದ ಹರಿವು ಇರುವುದರಿಂದ ನಾಳೆ ಕೂಡಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.27ರಂದು ಎಲ್ಲಾ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಆದರೆ ಪಿಯು ಡಿಗ್ರಿ ಕಾಲೇಜುಗಳಿಗೆ ರಜೆ ನೀಡಿಲ್ಲ.
ಕಳೆದ ಹಲವು ದಿನಗಳಿಂದ ಮಳೆ ತೀವ್ರಗೊಂಡಿದ್ದು, ದಕ್ಷಿಣ ಕನ್ನಡದಾದ್ಯಂತ ಸತತ ಮೂರು ದಿನದಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಹಾಗಾಗಿ ನಾಳೆ ಕೂಡಾ ಈ ರಜೆ ಮುಂದುವರಿದಿದ್ದು, ಕೇವಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ನೀಡಲಾಗಿದ್ದು, ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 27.07.2023 ರಂದು ರಜೆಯನ್ನು ಘೋಷಿಸಲಾಗಿದೆ.
2) ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತ ಪಾಲಕರು ಜಾಗ್ರತೆ ವಹಿಸುವುದು, ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
3) ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
4) ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
5) ಪ್ರವಾಸಿಗರು / ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
6) ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.