Traffic Rules: ವಾಹನ ಸವಾರರಿಗೆ ಕಟ್ಟೆಚ್ಚರ! ಈ ನಿಯಮ ಪಾಲಿಸದೇ ಇದ್ದಲ್ಲಿ ನಿಮ್ಮ ಡಿಎಲ್ ಕ್ಯಾನ್ಸಲ್ ಆಗೋದು ಪಕ್ಕಾ !!
Traffic Rule: ಸಂಚಾರ ನಿಯಮ (Traffic Rule) ಪಾಲಿಸದವರಿಗಾಗಿ, ಸಂಚಾರ ನಿಯಂತ್ರಣಕ್ಕಾಗಿ ಪೊಲೀಸರು ಮತ್ತು ಅಧಿಕಾರಿಗಳು ಹಲವು ಹೊಸ ನಿಯಮಗಳನ್ನು ತರುತ್ತಿರುವುದು, ಅಲ್ಲದೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಅದನ್ನು ನಿಯಂತ್ರಿಸಲು ಹೊಸ ಸಂಚಾರ ನಿಯಮಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ.
ಹೌದು, ಇನ್ನು ಮುಂದೆ ರಾಜ್ಯದ ಹೆದ್ದಾರಿಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ಚಾಲನಾ ಪರವಾನಿಗೆ ರದ್ದು ಮಾಡಲಾಗುವುದು ಎಂದು ತಿಳಿಸಲಾಗಿದೆ. ಸದ್ಯ ಬೆಂಗಳೂರು ನಗರ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಯಲ್ಲಿದ್ದು, ರಾಜ್ಯವ್ಯಾಪಿಯಾಗಿ ವಿಸ್ತರಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ.
ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ರಸ್ತೆ ಮತ್ತು ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಕುರಿತಾಗಿ ಸೂಚನೆ ನೀಡಿದ್ದಾರೆ.
ಇನ್ನು ಅತಿ ವೇಗದ ಚಾಲನೆ, ಅಜಾಗರೂಕತೆಯ ಚಾಲನೆ, ಶಿಸ್ತುಪಥ ಉಲ್ಲಂಘನೆ, ವ್ಹೀಲಿಂಗ್, ಚಾಲನೆ ಮಾಡುವಾಗ ಮೊಬೈಲ್ ಬಳಕೆ, ಹೆಲ್ಮೆಟ್ ರಹಿತ ಚಾಲನೆ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಲಾದ ಪ್ರಕರಣಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ಚಾಲಕರು, ಸವಾರರ ಡಿಎಲ್ ಜಪ್ತಿ ಮಾಡಿ ಅಮಾನತು ಮಾಡುವಂತೆ ಸಾರಿಗೆ ಇಲಾಖೆಗೆ ರವಾನೆ ಮಾಡಲಾಗುತ್ತದೆ.
ಮುಖ್ಯವಾಗಿ ಮೊದಲ ಬಾರಿ ಸಂಚಾರ ನಿಯಮ ಉಲ್ಲಂಘನೆಗೆ ಮೂರು ತಿಂಗಳು ಡಿಎಲ್ ಅಮಾನತು ಮಾಡಲು ಕ್ರಮ ಕೈಗೊಳ್ಳಲಾಗುವುದು. ಪದೇಪದೇ ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ಶಾಶ್ವತವಾಗಿ ಡಿಎಲ್ ವಜಾ ಮಾಡಲು ಕಾಯ್ದೆಯಲ್ಲಿ ಅವಕಾಶವಿದ್ದು, ಇದನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.
ಇದಕ್ಕಾಗಿ ಸ್ವಯಂ ಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಹಂತ ಹಂತವಾಗಿ ಎಲ್ಲಾ ಹೆದ್ದಾರಿಗಳಲ್ಲಿಯೂ ಈ ರೀತಿ ಕ್ಯಾಮೆರಾಗಳನ್ನು ಅಳವಡಿಸಿ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಈಗಾಗಲೇ ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಎರಡು ತಿಂಗಳಿಂದ ಕಟ್ಟುನಿಟ್ಟಾಗಿ ಸಂಚಾರ ನಿಯಮ ಜಾರಿಯಲ್ಲಿದ್ದು, ಮುಂಜಾಗ್ರತಾ ಕ್ರಮ ಕೈಗೊಂಡ ಕಾರಣ ಅಪಘಾತಗಳ ಸಂಖ್ಯೆ ಇತ್ತೀಚಿಗೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಸಂಚಾರ ನಿಯಮ ಜಾರಿಗೊಳಿಸಲಾಗುವುದು.