ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂರು ಮಂದಿ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

 

ಬೆಂಗಳೂರು : 2022ರ ಜುಲೈ 26ರಂದು ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ರದ್ದುಪಡಿಸಿ ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ.ಅನಿಲ್ ಕೆ.ಕಟ್ಟಿ ಅವರಿದ್ದ ಹೈಕೋರ್ಟ್‌ ವಿಭಾಗೀಯ ಪೀಠ ಆದೇಶ ನೀಡಿದೆ.

ಪ್ರವೀಣ್ ನೆಟ್ಟಾರು ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪವಿರುವ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಕ್ವಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಅವರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಜಾಮೀನಿಗರ ಅರ್ಜಿ ಸಲ್ಲಿಸಿರುವ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಪ್ರವೀಣ್ ನೆಟ್ಟಾರು ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಪ್ರತ್ಯಕ್ಷವಾಗಿ ಹಾಜರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಸಂಚಿನ ಸಭೆಯಲ್ಲಿ ಭಾಗವಹಿಸಿದ್ದರು ಹಾಗೂ ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು. ಸಂಚು ರೂಪಿಸಲು ಯಾವುದೇ ಬಹಿರಂಗ ಕಾಣಿಸಬೇಕೇಂದೇನು ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನಾಲ್ವರು ಸಾಕ್ಷಿಗಳ ಹೇಳಿಕೆ ಪ್ರಕಾರ ಆರೋಪಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಪೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ, ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ಪೀಠ ಆದೇಶದಲ್ಲಿ ಹೇಳಿದೆ.

ಮೇಲ್ಮನವಿದಾರರು ಪ್ರವೀಣ್ ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಕೆಲಸವಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ (ಯುಎಪಿಎ) ಆರೋಪಿಗಳ ನಡೆಸಿರುವ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಪೀಠ ಮೇಲ್ಮನವಿಯನ್ನು ವಜಾಗೊಳಿಸಿದೆ.

ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆ ಸಮೀಪದ ಮಾಸ್ತಿಕಟ್ಟೆಯಲ್ಲಿ ಅಕ್ಷಯ ಫ್ರೆಶ್ ಚಿಕನ್ ಫಾರ್ಮ್ ಶಾಪ್ ನಡೆಸುತ್ತಿದ್ದರು. 2022 ರ ಜು. 26ರಂದು ರಾತ್ರಿ 8:30 ರ ವೇಳೆ ಅಂಗಡಿ ಮುಚ್ಚಿ ಮನೆಗೆ ಹೋಗಲು ಸಿದ್ದತೆಯಲ್ಲಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ನೆಟ್ಟಾರು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದರು.

ಘಟನೆ ಕುರಿತು ಪ್ರವೀಣ್ ಅವರ ಅಂಗಡಿಯಲ್ಲಿ ಕೆಲಸಕ್ಕಿದ್ದ ಮಧು ಕುಮಾರ್ ಅವರು ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದಾಗ ಪ್ರಕರಣವನ್ನು ಎನ್‌ಐಎಗೆ ವಹಿಸಿ 2022 ರ ಆ. 3ರಂದು ಕೇಂದ್ರ ಸರ್ಕಾರ ಆದೇಶಿಸಿತ್ತು. 2022 ರ ಆ. 4ರಂದು ಎನ್‌ಐಎ ತನಿಖಾಧಿಕಾರಿಗಳು ಪ್ರಕರಣವನ್ನು ಮತ್ತೆ ದಾಖಲಿಸಿಕೊಂಡಿದ್ದರು. ಬಳಿಕ ತನಿಖೆ ಮುಂದುವರಿಸಿ, ಮೇಲ್ಮನವಿದಾರ ಆರೋಪಿಗಳನ್ನು ಬಂಧಿಸಿದ್ದರು.

ಈ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ 49ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ (ಎನ್‌ಐಎ ವಿಶೇಷ ನ್ಯಾಯಾಲಯ) 2023 ರ ಏ. 29ರಂದು ಆದೇಶಿಸಿತು. ಇದರಿಂದಾಗಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆರೋಪಿಗಳ ವಿರುದ್ಧದ ಪ್ರಕರಣವು ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

Leave A Reply

Your email address will not be published.